Advertisement

ಪದವೀಧರ, ಶಿಕ್ಷಕರ ಕ್ಷೇತ್ರದಿಂದ ಚುನಾವಣೆ

11:13 PM Sep 24, 2019 | Lakshmi GovindaRaju |

ಬೆಂಗಳೂರು: ರಾಜ್ಯದ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯುವ ಚುನಾವಣೆ ಹಿನ್ನೆಲೆಯಲ್ಲಿ ಅ.1ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪ್ರಾರಂಭವಾಗಲಿದ್ದು, ಅರ್ಹ ಮತದಾರರು ಹೆಸರು ಸೇರ್ಪಡೆ ಮಾಡಿಕೊಳ್ಳಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದ್ದಾರೆ.

Advertisement

ಈ ಕುರಿತು ಆಯೋಗದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಧಾನಪರಿಷತ್‌ಗೆ ಆಗ್ನೇಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಚೌಡರೆಡ್ಡಿ ತೂಪಲ್ಲಿ, ಪಶ್ಚಿಮ ಪದವೀಧರ ಕ್ಷೇತ್ರದ ಎಸ್‌.ವಿ.ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರದ ಶರಣಪ್ಪ ಮಟ್ಟೂರು, ಬೆಂಗಳೂರು ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಅವರ ಅವಧಿಯು 2020ರ ಜೂ.30ಕ್ಕೆ ಅಂತ್ಯವಾಗಲಿದೆ. ಈ ಕ್ಷೇತ್ರಗಳಿಗೆ ಚುನಾವಣೆ ನಡೆಸಬೇಕಿರುವ ಕಾರಣ ಮತದಾರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಅ.1ರಿಂದ ಆರಂಭಿಸ ಲಾಗುತ್ತಿದೆ ಎಂದು ಹೇಳಿದರು.

ಮತದಾರ ಪಟ್ಟಿ ಪರಿಷ್ಕರಣೆ ಸಂಬಂಧ ಅ.1ರಂದು ಸಾರ್ವಜನಿಕ ನೋಟಿಸ್‌ ಪ್ರಕಟಿಸಲಾಗುವುದು. 15ರಂದು ಮೊದಲ ಬಾರಿಗೆ ಮತ್ತು 25ರಂದು ಎರಡನೇ ಬಾರಿಗೆ ಪತ್ರಿಕೆಗಳಲ್ಲಿ ನೋಟಿಸ್‌ ಪ್ರಕಟಿಸಲಾಗುತ್ತದೆ. ನ.6ರಂದು ಮತದಾರರ ಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನ. ನ.19ರಂದು ಕರಡು ಮತದಾರರ ಪಟ್ಟಿ ಮುದ್ರಣಗೊಳ್ಳಲಿದೆ. ನ.23ರಂದು ಕರಡು ಪಟ್ಟಿಯನ್ನು ಪ್ರಕಟಿಸಲಾಗುವುದು.

ಅಂದಿನಿಂದ ಡಿ.9ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗುವುದು. ಡಿ.26ರಂದು ಬಂದಿರುವ ಎಲ್ಲಾ ಆಕ್ಷೇಪಣೆಗಳನ್ನು ಪರಿಷ್ಕರಣೆ ಮಾಡಲಾ ಗುವುದು. ಡಿ.30ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು ಎಂದು ವಿವರಿಸಿದರು. ಪಶ್ಚಿಮ ಪದವೀಧರ ಕ್ಷೇತ್ರದ ವ್ಯಾಪ್ತಿಗೆ ಧಾರವಾಡ, ಹಾವೇರಿ, ಗದಗ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಬರಲಿವೆ. ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಚಿತ್ರದುರ್ಗ, ದಾವಣಗೆರೆ (ಚನ್ನಗಿರಿ, ಹೊನ್ನಾಳಿ, ಹರಪ್ಪನಹಳ್ಳಿ ಹೊರತುಪಡಿಸಿ), ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಒಳಗೊಂಡಿವೆ.

ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಹರಪನಹಳ್ಳಿ ತಾಲೂಕುಗಳು ಒಳಗೊಂಡಿವೆ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲೆಗಳು ಬರಲಿವೆ. ಈ ಎಲ್ಲಾ ಕ್ಷೇತ್ರಗಳ ವ್ಯಾಪ್ತಿಯ ಪ್ರಾದೇಶಿಕ ಆಯುಕ್ತರು ಮತದಾರರ ಪಟ್ಟಿ ಪರಿಷ್ಕರಣೆಯ ನೋಡಲ್‌ ಅಧಿಕಾರಿ ಯಾಗಿದ್ದು, ಜಿಲ್ಲಾಧಿಕಾರಿ ಸಹಾಯಕ ನೋಡಲ್‌ ಅಧಿಕಾರಿಯಾಗಿ ರುತ್ತಾರೆ ಎಂದು ಸಂಜೀವ್‌ ಕುಮಾರ್‌ ಮಾಹಿತಿ ನೀಡಿದರು.

Advertisement

ಉಪ ಕದನ: ನಾಮಪತ್ರ ಅಂಗೀಕಾರವೇ ಅಂತಿಮ
ಬೆಂಗಳೂರು: ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಯಾರೂ ಬೇಕಾದರೂ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸದಂತೆ ಯಾರಿಗೂ ಅಡ್ಡಿಪಡಿಸಲಾಗುವುದಿಲ್ಲ. ಆದರೆ, ನಾಮಪತ್ರ ಅಂಗೀಕಾರ ಮಹತ್ವದ ಘಟ್ಟ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ತಿಳಿಸಿದ್ದಾರೆ.  “ಸುಪ್ರೀಂಕೋರ್ಟ್‌ನಲ್ಲಿ ಅನರ್ಹ ಶಾಸಕರ ಅರ್ಜಿ ವಿಚಾರಣೆಗೆ ಬಂದಾಗ ಅನರ್ಹ ಶಾಸಕರ ಸ್ಪರ್ಧೆಗೆ ಯಾವುದೇ ಆಕ್ಷೇಪವಿಲ್ಲ ಎಂದು ಚುನಾವಣಾ ಆಯೋಗ ಹೇಳಿದೆ.

ಆದರೆ, ಅನರ್ಹರ ಸ್ಪರ್ಧೆಗೆ ಅವಕಾಶವಿಲ್ಲ ಎಂದು ಶನಿವಾರದ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದೀರಲ್ಲಾ ಎಂದು ಸುದ್ದಿಗಾರರು ಕೇಳಿದ್ದಕ್ಕೆ ಸಂಜೀವ್‌ಕುಮಾರ್‌ ಹೀಗೆ ಪ್ರತಿಕ್ರಿಯಿಸಿದರು. “ಅನರ್ಹ ಶಾಸಕರಿಗೆ ಸ್ಪರ್ಧಿಸಲು ಅವಕಾಶವಿಲ್ಲ’ ಎಂದು ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ಕೆಲವರು ಅವರದೇ ಆದ ರೀತಿಯಲ್ಲಿ ವ್ಯಾಖ್ಯಾನಿಸಿಕೊಂಡಿದ್ದಾರೆ. ಅನರ್ಹರ ಸ್ಪರ್ಧೆಗೆ ಆಕ್ಷೇಪವಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂಕೋರ್ಟ್‌ಗೆ ಹೇಳಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಆದರೆ, ಈ ವಿಚಾರ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ.

ಅದು ನ್ಯಾಯಾಂಗ ನಿಂದನೆ ಆಗಲಿದೆ. ಈ ಹಂತದಲ್ಲಿ ಅನರ್ಹ ಶಾಸಕರ ಬಗ್ಗೆ ಮಾತನಾಡುವುದಿಲ್ಲ ಎಂದರು. ಹಾಗಾದರೆ, ಅನರ್ಹ ಶಾಸಕರು ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಬಹುದೇ ಎಂದು ಕೇಳಿದ ಪ್ರಶ್ನೆಗೆ, “ಯಾರೂ ಬೇಕಾದರೂ ನಾಮಪತ್ರ ಸಲ್ಲಿಸಬಹುದು. ನಾಮಪತ್ರ ಸಲ್ಲಿಸದಂತೆ ಯಾರಿಗೂ ಅಡ್ಡಿಪಡಿಸುವುದಿಲ್ಲ. ಆದರೆ, ನಾಮಪತ್ರ ಅಂಗೀಕಾರವೇ ಅಂತಿಮ. ಅದನ್ನು ಸಂಬಂಧಪಟ್ಟ ಚುನಾವಣಾಧಿಕಾರಿಗಳು ನಿರ್ಧರಿಸುತ್ತಾರೆ. ಸುಪ್ರೀಂಕೋರ್ಟ್‌ ತೀರ್ಪು ಬಳಿಕ ಸ್ಪಷ್ಟತೆ ಸಿಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next