ಬೆಂಗಳೂರು: ರಾಜ್ಯದ ಕಾಫಿ ಬೆಳೆಗಾರರ ನೆರವಿಗೆ ಧಾವಿಸಿರುವ ಸರಕಾರ 10 ಎಚ್.ಪಿ ವರೆಗಿನ ಪಂಪ್ ಸೆಟ್ ಇರುವ ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್ ಪೂರೈಕೆ ಮಾಡಲು ನಿರ್ಧರಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಈ ವಿಚಾರ ಪ್ರಕಟಿಸಿದ್ದಾರೆ.
ಕಾಫಿ ಬೆಳೆಗಾರರ ಸಮಸ್ಯೆಗೆ ಸಂಬಂಧಪಟ್ಟಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಅವರ ಜತೆ ಸಭೆ ನಡೆಸಿ ಚರ್ಚೆ ನಡೆಸಿದ ಬೊಮ್ಮಾಯಿ ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ.
ಕಾಫಿ ಬೆಳೆಗಾರರಿಗೆ ವಿದ್ಯುತ್ ಸಬ್ಸಿಡಿ ನೀಡಲು ಸರ್ಕಾರ ತೀರ್ಮಾನ ಮಾಡಿದೆ. ಆದರೆ ಅದರ ದುರುಪಯೋಗವಾಗಬಾರದು. ಹೀಗಾಗಿ ಸೂಕ್ತ ನಿಯಮ ಜಾರಿಗೆ ತರಲು ನಿರ್ಧರಿಸಿದ್ದೇವೆ. ಇಂಧನ ಸಚಿವರ ಜತೆಗೆ ಈ ಬಗ್ಗೆ ಈಗಾಗಲೇ ಚರ್ಚೆ ಮಾಡಿದ್ದೇನೆ. ಕೆಲವರು 10 ಎಚ್ ಪಿ ಬದಲು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸವವರು ಇದ್ದಾರೆ. ಇಂಥ ದುರ್ಬಳಕೆ ತಡೆಯುವುದಕ್ಕೂ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು.
ಇದನ್ನೂ ಓದಿ:ವಿಸ್ತರಣೆಯ ಕಾರ್ಕಳ ಉತ್ಸವ ಇಂದು ಸಂಪನ್ನ
ಚಿಕ್ಕಮಗಳೂರು, ಮಡಿಕೇರಿ ಸೇರಿದಂತೆ ರಾಜ್ಯದ ಕಾಫಿ ಬೆಳೆಗಾರರ ಸಮಸ್ಯೆಗೆ ಸಂಬಂಧಪಟ್ಟಂತೆ ಇಂಧನ ಸಚಿವ ವಿ.ಸುನೀಲ್ ಕುಮಾರ್ ಕೆಲ ದಿನಗಳ ಹಿಂದೆ ಅಧಿಕಾರಿಗಳ ಜತೆಗೆ ಸಭೆ ನಡೆಸಿದ್ದರು. ಬೇಸಿಗೆಯಲ್ಲಿ ಮೂರು ತಿಂಗಳು ಕಾಲ ಕಾಫಿ ಬೆಳೆಗಾರರಿಗೆ ನಿರಂತರ 12 ಗಂಟೆ ವಿದ್ಯುತ್ ಪೂರೈಕೆಗೆ ಸುನೀಲ್ ಕುಮಾರ್ ಆದೇಶ ನೀಡಿದ್ದರು. ಇದರ ಬೆನ್ನಲ್ಲೇ ಸರಕಾರ ಈ ಮಹತ್ವದ ನಿರ್ಣಯ ತೆಗೆದುಕೊಳ್ಳುವ ಮೂಲಕ ಬೆಳೆಗಾರರ ನೆರವಿಗೆ ಧಾವಿಸಿದೆ.