ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತಿದ್ದ “ದ್ರೋಣ’ ಆನೆ ಸಾವನ್ನಪ್ಪಿದ್ದ ಹಿನ್ನೆಲೆಯಲ್ಲಿ ಮೈಸೂರು, ಮಡಿಕೇರಿ, ಶಿವಮೊಗ್ಗ ಸೇರಿ ರಾಜ್ಯದ ಆನೆ ಶಿಬಿರಗಳಲ್ಲಿ ಆಹಾರ, ನೀರು ಮತ್ತು ಔಷಧ ವ್ಯವಸ್ಥೆ ಇಲ್ಲದೆ ಆನೆಗಳು ಸಾವನ್ನಪ್ಪುತ್ತಿರುವ ಬಗ್ಗೆ ವಾಸ್ತವ ಸಂಗತಿ ತಿಳಿದುಕೊಳ್ಳಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಕೋರಿ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ವಕೀಲ ಎನ್.ಪಿ. ಅಮೃತೇಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಜಾನ್ ಮೈಕೆಲ್ ಕುನ್ಹಾ ಹಾಗೂ ನ್ಯಾ. ಎಚ್.ಟಿ. ನರೇಂದ್ರ ಪ್ರಸಾದ್ ಅವರಿದ್ದ ರಜಾ ಕಾಲದ ವಿಭಾಗೀಯ ನ್ಯಾಯಪೀಠ, ಅರಣ್ಯ ಇಲಾಖೆ, ಮೈಸೂರು ಮತ್ತು ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸೇರಿ ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಹೆಸರಿಸಲಾದ ಎಲ್ಲರಿಗೂ ನೋಟಿಸ್ ಜಾರಿಗೆ ಆದೇಶಿಸಿ, ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರೂ ಆದ ವಕೀಲ ಎನ್.ಪಿ. ಅಮೃತೇಶ್ ವಾದ ಮಂಡಿಸಿ, ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ವಿಶೇಷವಾಗಿ ಆನೆಗಳು ಹೆಚ್ಚಿನ ಪ್ರಮಾಣದಲ್ಲಿ ಸಾವನ್ನಪ್ಪುತ್ತಿವೆ. ಅವುಗಳಿಗೆ ಸರಿಯಾಗಿ ಆಹಾರ, ಕುಡಿಯುವ ನೀರು ಮತ್ತು ಔಷಧ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಕೊಡಗಿನ ದುಬಾರೆ, ಶಿವಮೊಗ್ಗದ ಸಕ್ರೆಬೈಲು ಮತ್ತು ನಾಗರಹೊಳೆಯಲ್ಲಿರುವ ಆನೆ ಶಿಬಿರಗಳಲ್ಲಿ ಆನೆಗಳು ಸಾವನ್ನಪ್ಪುತ್ತಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
“ದ್ರೋಣ’ ಸಾವು: ಅಲ್ಲದೇ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಮೂರು ಬಾರಿ ಅಂಬಾರಿ ಹೊತ್ತಿದ್ದ “ದ್ರೋಣ’ ಆನೆ ಸಹ ಕಳೆದ ಏಪ್ರಿಲ್ 27 ರಂದು ಸಾವನ್ನಪ್ಪಿದೆ. ಸರಿಯಾದ ಔಷಧಿ ಮತ್ತು ಆರೈಕೆ ಇಲ್ಲದ ಕಾರಣ ಅದು ಸಾವನ್ನಪ್ಪಿದೆ. ಶಿಬಿರಗಳಲ್ಲಿ ಆನೆಗಳು ಸಾವನ್ನಪ್ಪುತ್ತಿದ್ದರೂ, ಸರ್ಕಾರ ಮತ್ತು ಅರಣ್ಯ ಇಲಾಖೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಅರ್ಜಿದಾರರು ದೂರಿದ್ದಾರೆ.
ಅಲ್ಲದೇ ರಾಜ್ಯದ ಆನೆ ಶಿಬಿರಗಳಲ್ಲಿ ಮೂಲಸೌಕರ್ಯಗಳಿಲ್ಲ. ಹಾಗಾಗಿ, ತಕ್ಷಣ ಆನೆ ಶಿಬಿರಗಳಿಗೆ ತಜ್ಞ ವೈದ್ಯರನ್ನು ನೇಮಿಸಬೇಕು. ಜತೆಗೆ ಈ ಬಗ್ಗೆ ಅಧ್ಯಯನ ನಡೆಸಿ ವಾಸ್ತವ ಸ್ಥಿತಿ ಮತ್ತು ಕಾರಣ ಕಂಡು ಹಿಡಿಯಲು ಉನ್ನತ ಮಟ್ಟದ ಸಮಿತಿ ರಚಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.