ಬೆಂಗಳೂರು: ರಾಜ್ಯದಲ್ಲಿ ಮಕ್ಕಳಲ್ಲಿನ ಅಪೌಷ್ಠಿ ಕತೆ ಯನ್ನು ನಿವಾರಿಸುವ ವಿಚಾರಕ್ಕೆ ಸಂಬಂಧಿಸಿ ದಂತೆ ನ್ಯಾ. ಎನ್.ಕೆ. ಪಾಟೀಲ್ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿ ಸಿದ ವರದಿ ಸಲ್ಲಿಸಲು ಹಾಗೂ ಈ ನಿಟ್ಟಿನಲ್ಲಿ ನ್ಯಾಯಾಲಯ ಆಗಾಗ ನೀಡಿರುವ ಆದೇಶಗಳ ಅನುಪಾಲನೆಯಲ್ಲಿ ನಿರ್ಲಕ್ಷ್ಯ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವುದಾಗಿ ಹೈಕೋರ್ಟ್ ಸೋಮವಾರ ಎಚ್ಚರಿಕೆ ನೀಡಿದೆ.
ಈ ಕುರಿತಂತೆ ಬೆಳಗಾವಿ ಜಿಲ್ಲೆಯ ಅಥಣಿಯ ವಿಮೋಚನಾ ಸಂಸ್ಥೆಯ ಬಿ.ಎಲ್. ಪಾಟೀಲ್ ಅವರು 2011ರಲ್ಲಿ ಮುಖ್ಯ ನ್ಯಾಯ ಮೂರ್ತಿ ಗಳಿಗೆ ಬರೆದ ಪತ್ರ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯ ಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆ ಬಂದಿತ್ತು.
ಈ ವೇಳೆ ಸರ್ಕಾರ ಪರ ವಕೀಲರು ವಾದ ಮಂಡಿಸಿ, ಅನುಪಾಲನಾ ವರದಿ ಸಲ್ಲಿಸಲು ಕಾಲಾವಕಾಶ ಕೋರಿದರು. ಇದರಿಂದ ಅಸಮಾಧಾನಗೊಂಡ ಮುಖ್ಯ ನ್ಯಾಯ ಮೂರ್ತಿಗಳು, ಮಕ್ಕಳಲ್ಲಿನ ಅಪೌಷ್ಠಿಕತೆಯ ಪ್ರಮಾಣ ರಾಜ್ಯದಲ್ಲಿ ಅಪಾಯಕಾರಿ ಮಟ್ಟ ತಲುಪುತ್ತಿದೆ. ಇದು ಸಾಮಾನ್ಯ ವಿಚಾರವಲ್ಲ. ಅತ್ಯಂತ ಗಂಭೀರ ವಿಷಯವಾಗಿದ್ದು, ಸರ್ಕಾರದ ತುರ್ತು ಗಮನ ಹಾಗೂ ಕಾಳಜಿಯ ಅವಶ್ಯಕತೆ ಯಿದೆ ಎಂದು ತೀಕ್ಷ್ಣವಾಗಿ ಹೇಳಿದರು.
ಹಾಗಾಗಿ, ಈ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ. ಎನ್.ಕೆ. ಪಾಟೀಲ್ ನೇತೃತ್ವದ ತಜ್ಞರ ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಿದ ಬಗ್ಗೆ ವರದಿ ಸಲ್ಲಿಸುವಂತೆ ಸೆ.16ರಂದು ನೀಡಿದ್ದ ನಿರ್ದೇಶನ ಹಾಗೂ ಈ ನಿಟ್ಟಿನಲ್ಲಿ ನ್ಯಾಯಾಲಯ ಆಗಾಗ ನೀಡಿರುವ ಆದೇಶ ಮತ್ತು ನಿರ್ದೇಶನಗಳನ್ನು ಪಾಲಿಸಿದ ಅನು ಪಾಲನಾ ವರದಿ ಸಲ್ಲಿಸಬೇಕು. ಅ.21ರಂದು ನೀಡಲಾಗಿದ್ದ ಆದೇಶ ಪಾಲಿಸಿದ್ದರ ಬಗ್ಗೆ ಮುಂದಿನ ವಿಚಾರಣೆ ವೇಳೆ ವಿವರಣೆ ನೀಡಬೇಕು. ಅದನ್ನು ಆಧರಿಸಿ ನ್ಯಾಯಾಂಗ ನಿಂದನೆ ಆರೋಪದಡಿ ಕ್ರಮ ಜರುಗಿಸುವ ಕುರಿತು ತೀರ್ಮಾನಿಸಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ನ.20ಕ್ಕೆ ಮುಂದೂಡಿತು.