ಬೆಂಗಳೂರು: ನವಿ ಮುಂಬಯಿ ಮಾದರಿಯಲ್ಲಿ ನವ ಬೆಂಗಳೂರು ನಿರ್ಮಾಣ ಪ್ರಸ್ತಾವ ಮತ್ತೆ ಮುನ್ನೆಲೆಗೆ ಬಂದಿದ್ದು, ಆ ಬಗ್ಗೆ ಚಿಂತನೆ ನಡೆಸುವ ಅಗತ್ಯವಿದೆ ಎಂದು ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಶುಕ್ರವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್‌ನ ಎನ್.ಎನ್.ಹ್ಯಾರೀಸ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರಿಗೆ 50 ಕಿ.ಮೀ. ದೂರದಲ್ಲಿ ನವ ಬೆಂಗಳೂರು ನಿರ್ಮಾಣದ ಬಗ್ಗೆ ಚರ್ಚೆಗಳು ನಡೆಯಬೇಕಿದೆ ಎಂದರು.
ಇದೀಗ ಬೆಂಗಳೂರಿಗೆ ಕೈಗಾರಿಕೆಗಳು ಬರಲು ಹಿಂದೇಟು ಹಾಕುತ್ತಿವೆ. ಇಲ್ಲಿ ಒತ್ತಡ ಹೆಚ್ಚಾಗಿದೆ. ಹೀಗಾಗಿಯೇ ಸರಕಾರವು ಉತ್ತರ ಕರ್ನಾಟಕ ಸಹಿತ ಇತರ ಪ್ರಮುಖ ನಗರಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಮುಂದಾಗಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ ಬಂಡವಾಳ ಹೂಡಿಕೆ ಸಮಾವೇಶ ನಡೆಸಿ ಯಶಸ್ವಿಯಾಗಿದ್ದು ಸದ್ಯದಲ್ಲೇ ಕಲಬುರಗಿಯಲ್ಲಿ ಸಮಾವೇಶ ನಡೆಸಲಾಗುವುದು. ಮಂಗಳೂರಿನಲ್ಲಿ ಎರಡು ದಿನಗಳ ಸಮಾವೇಶ ನಡೆಸಲು ಮನವಿ ಬಂದಿದೆ ಎಂದು ಹೇಳಿದರು.
ಇದಕ್ಕೂ ಮುನ್ನ ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬೆಂಗಳೂರಿನ ಒತ್ತಡ ಕಡಿಮೆ ಮಾಡಲು ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕಾಭಿವೃದ್ಧಿಗೆ ಒತ್ತು ನೀಡಲು ಸರಕಾರ ನಿರ್ಧರಿಸಿದೆ. 2 ಮತ್ತು 3 ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆ ಸಮಾವೇಶವನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.
ಬೆಂಗಳೂರಿಗೆ ಹತ್ತಿರ ಇರುವ ಮೈಸೂರಿನಲ್ಲಿಯೂ ಕೈಗಾರಿಕೆ ಅಭಿವೃದ್ಧಿಗೆ ಹೆಚ್ಚು ಅವಕಾಶಗಳಿದ್ದು ಇತ್ತೀಚೆಗೆ ನಾನು ಭೇಟಿ ನೀಡಿದ್ದ ಸಂದರ್ಭದಲ್ಲಿ ಅಲ್ಲಿನ ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ಜತೆ ಮಾತುಕತೆ ನಡೆಸಿದ್ದೇನೆ ಎಂದು ಹೇಳಿದರು.
2019-24 ನೂತನ ಕೈಗಾರಿಕೆ ನೀತಿಯಲ್ಲಿ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆ ಅಭಿವೃದ್ಧಿಪಡಿಸಲು ಪೂರಕ ಆಂಶಗಳನ್ನು ಸೇರ್ಪಡೆ ಮಾಡಲಾಗುವುದು. ಹಲವು ವಿನಾಯಿತಿಗಳನ್ನು ಘೋಷಿಸಲಾಗುವುದು ಎಂದು ತಿಳಿಸಿದರು.