ಕಾಪು: ಬೆಳಪು ಗ್ರಾ.ಪಂ. ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್, ಘನ ಮತ್ತು ದ್ರವ ತ್ಯಾಜ್ಯವನ್ನು ಬೇರ್ಪಡಿಸುವ ವಿಧಾನ ಹಾಗೂ ಕೋಳಿ ತ್ಯಾಜ್ಯ ವಿಲೇವಾರಿಗೆ ಪ್ರತ್ಯೇಕ ಘಟಕ ನಿರ್ಮಿಸಿರುವುದು ಸ್ವಾಗತಾರ್ಹವಾಗಿದೆ. ಭವಿಷ್ಯದಲ್ಲಿ ಅತ್ಯಾಧುನಿಕ ತ್ಯಾಜ್ಯ ವಿಲೇವಾರಿ ಘಟಕವನ್ನು ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಡುಪಿ ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾ ಧಿಕಾರಿ ಪ್ರೀತಿ ಗೆಹ್ಲೋಟ್ ತಿಳಿಸಿದರು.
ಬೆಳಪು ಗ್ರಾ.ಪಂ.ಗೆ ಭೇಟಿ ನೀಡಿದ ಅವರು ಇಲ್ಲಿನ ತ್ಯಾಜ್ಯ ವಿಲೇವಾರಿ ಘಟಕದ ಯೋಜನಾ ಪ್ರದೇಶವನ್ನು ಪರಿಶೀಲಿಸಿದರು. ಬೆಳಪು ಗ್ರಾ.ಪಂ. ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಅವರು ಗ್ರಾಮದಲ್ಲಿ ತ್ಯಾಜ್ಯ ನಿರ್ವಹಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವಿವರಿಸಿದರು.
ಗ್ರಾಮದ ಅಭಿವೃದ್ಧಿಯ ದೃಷ್ಟಿಯಿಂದ ಅತ್ಯಾಧುನಿಕ ರೀತಿಯ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆಗಾಗಿ ಮೂರು ಎಕ್ರೆ ಜಾಗವನ್ನು ಮೀಸಲಿಡಲಾಗಿದೆ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ರಾಸಾಯನಿಕ ಸಾವಯವ ಗೊಬ್ಬರ ಉತ್ಪನ್ನದ ಘಟಕವನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಲಾಗಿದ್ದು, ಇದರೊಂದಿಗೆ ಸುತ್ತಮುತ್ತಲಿನ ಗ್ರಾಮದ ತ್ಯಾಜ್ಯ ವಿಲೇವಾರಿಗೂ ಸೂಕ್ತವಾಗಿ ಸಹಕಾರ ನೀಡಲಾಗುವುದು ಎಂದರು.
ಉಡುಪಿ ಜಿ. ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾ.ಪಂ. ಉಪಾಧ್ಯಕ್ಷೆ ಶೋಭಾ ಭಟ್, ಪಿ.ಡಿ.ಒ ಎಚ್. ಆರ್. ರಮೇಶ್, ಕಾರ್ಯದರ್ಶಿ ಸುಮಿತ್ರಾ ಆಚಾರ್ಯ ಹಾಗೂ ಗ್ರಾ. ಪಂ. ಸದಸ್ಯರು ಉಪಸ್ಥಿತರಿದ್ದರು.