ಬೆಂಗಳೂರು: ರೈತರ ಸುಸ್ಥಿರ ಬದುಕಿಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ. ಶೀಘ್ರವೇ ಜಿಲ್ಲಾ ಮಟ್ಟದ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೃಷಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ವಿಧಾನಸೌಧದಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಹಸಿರು ಕ್ರಾಂತಿಯ ಪಿತಾಮಹ ಡಾ.ಎಂ.ಎಸ್.ಸ್ವಾಮಿನಾಥನ್ ಅವರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ನಾಡಿನ ಕೃಷಿ ಪದ್ಧತಿ, ನೀರಾವರಿ ವ್ಯವಸ್ಥೆಯಲ್ಲಿ ಹಲವು ಬದಲಾವಣೆ ತರಲು ಚಿಂತಿಸಲಾಗಿದೆ. ಈ ನಿಟ್ಟಿನಲ್ಲಿ ಹಿರಿಯರಾದ ಡಾ.ಸ್ವಾಮಿನಾಥನ್ ಅವರು ಮಾರ್ಗದರ್ಶನ ನೀಡಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
ಭೇಟಿ ವೇಳೆ ರೈತರ ಆರ್ಥಿಕ ಸ್ಥಿತಿ ಸುಧಾರಣೆಗೆ ಮಾರ್ಗದರ್ಶನ ನೀಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಡಾ.ಎಂ.ಎಸ್.ಸ್ವಾಮಿನಾಥನ್, ದೇಶದಲ್ಲೇ ಅತ್ಯುತ್ತಮ ಸಂಸದೀಯ ವ್ಯವಸ್ಥೆ ಹೊಂದಿರುವ ರಾಜ್ಯ ಕರ್ನಾಟಕ. ಪ್ರತ್ಯೇಕವಾಗಿ ತೋಟಗಾರಿಕೆ ಇಲಾಖೆ ಹೊಂದಿರುವ ಮೊದಲ ರಾಜ್ಯವೆಂಬ ಹೆಗ್ಗಳಿಕೆಯೂ ಕರ್ನಾಟಕಕ್ಕೆ ಸಲ್ಲುತ್ತದೆ ಎಂದು ಸಂತಸ ವ್ಯಕ್ತಪಡಿಸಿದರು.
ತೋಟಗಾರಿಕೆಯನ್ನು ಬಲಪಡಿಸುವುದರಿಂದ ರೈತರು ಆರ್ಥಿಕವಾಗಿ ಸದೃಢರಾಗಲು ಸಾಧ್ಯ. ಇಂದು ಕೃಷಿ ಉತ್ಪಾದಕತೆ ಮಾತ್ರವಲ್ಲದೇ ರೈತರ ಆದಾಯ ಹೆಚ್ಚಳಕ್ಕೂ ಆದ್ಯತೆ ನೀಡಬೇಕಿದೆ. ಆ ಹಿನ್ನೆಲೆಯಲ್ಲಿ ಹೆಚ್ಚಿನ ಬೆಲೆ ಹೊಂದಿರುವ ಬೆಳೆಗಳನ್ನು ಬೆಳೆಯಲು ಆದ್ಯತೆ ನೀಡಬೇಕು ಎಂದು ಸ್ವಾಮಿನಾಥನ್ ಸಲಹೆ ನೀಡಿದರು. ಇದಕ್ಕೆ ಸ್ಪಂದಿಸಿದ ಕುಮಾರಸ್ವಾಮಿ, ಸಲಹೆಗಳನ್ನು ರಾಜ್ಯದ ಕೃಷಿ ವ್ಯವಸ್ಥೆಯಲ್ಲಿ ಅಳವಡಿಸಿಕೊಳ್ಳಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಕೃಷಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ, ತೋಟಗಾರಿಕೆ ಸಚಿವ ಎಂ.ಸಿ.ಮನಗೂಳಿ, ಪಶುಸಂಗೋಪನೆ ಮತ್ತು ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಿ.ವಿ.ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೃಷಿ ಇಲಾಖೆ ಕಾರ್ಯದರ್ಶಿ ಡಾ.ಯು.ಎಂ. ಮಹೇಶ್ವರರಾವ್ ಇತರೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.