ರಾಯಚೂರು: ಬಾಲ ಕಾರ್ಮಿಕ ಪದ್ಧತಿ ನಿವಾರಣೆಗಾಗಿ ಸಾಕಷ್ಟು ಕಾನೂನುಗಳು ಜಾರಿಯಾಗಿದ್ದರೂ ಅಷ್ಟೊಂದು ಪರಿಣಾಮಕಾರಿಯಾಗಿ ನಿಯಂತ್ರಣಕ್ಕೆ ಬಂದಿಲ್ಲ. ಅಧಿಕಾರಿಗಳು ಇನ್ನೂ ಹೆಚ್ಚಿನ ಶ್ರಮ ವಹಿಸಿ ಕೆಲಸ ಮಾಡಬೇಕಾದ ಅನಿವಾರ್ಯತೆ ಇದೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈಲೂರು ಶಂಕರರಾಮ ಹೇಳಿದರು.
ಜಿಪಂ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ಕಲಂ 17ರ ಅಡಿ ನೇಮಕಗೊಂಡ ನಿರೀಕ್ಷಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲ ಕಾರ್ಮಿಕರನ್ನು ದುಡಿಮೆಯಿಂದ ರಕ್ಷಿಸಿ ಶಿಕ್ಷಣ ಕೊಡಿಸುವ ಮೂಲಕ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗದಂತೆ ತಡೆಯುವ ಹೊಣೆ ಎಲ್ಲ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಬಾಲ ಕಾರ್ಮಿಕ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಬಾಲ ಕಾರ್ಮಿಕ ಪದ್ಧತಿ ಇನ್ನೂ ನಿವಾರಣೆಯಾಗಿಲ್ಲ. ಮಕ್ಕಳನ್ನು ಬಾಲಕಾರ್ಮಿಕರನ್ನಾಗಿ ದುಡಿಸಿಕೊಳ್ಳುವವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.
14 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಸಿಗಬೇಕು. ಬಾಲ್ಯ ವಿವಾಹ ಮಾಡಿದರೆ ಶಿಕ್ಷೆ ಎದುರಿಸಬೇಕಾಗುತ್ತದೆ. ಮಕ್ಕಳ ಮೇಲೆ ಯಾವುದೇ ರೀತಿಯ ದೌರ್ಜನ್ಯ ಎಸಗಿದರೆ ಹಾಗೂ ಶೋಷಣೆ ಮಾಡಿದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಬೇಕು ಎಂದು ಹೇಳಿದರು.
ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಮಂಗಳಾ ಹೆಗಡೆ ಮಾತನಾಡಿ, ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಕಾಯ್ದೆ, ಕಾನೂನುಗಳಿದ್ದರೂ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ. ಮಕ್ಕಳನ್ನು ದುಡಿಸಿಕೊಳ್ಳುವವರ ವಿರುದ್ಧ ಕ್ರಮ ಆಗುತ್ತಿಲ್ಲ ಎಂದು ವಿಷಾದಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಾಲ ಕಾರ್ಮಿಕ ಯೋಜನಾಧಿಕಾರಿ ಮಂಜುನಾಥ ರೆಡ್ಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಕ್ಕಳ ಸಂರಕ್ಷಣ ಯೋಜನೆ ಯುನಿಸೆಫ್ ಪ್ರಾದೇಶಿಕ ಸಂಯೋಜನಾಧಿಕಾರಿ ರಾಘವೇಂದ್ರ ಭಟ್ ಉಪನ್ಯಾಸ ನೀಡಿದರು. ನ್ಯಾಯಾಧೀಶ ಸುದೇಶ ಪರದೇಶ, ಉಪವಿಭಾಗಾಧಿಕಾರಿ ಶಿಲ್ಪಾ ಶರ್ಮಾ, ಕಾರ್ಮಿಕ ಅಧಿಕಾರಿ ವೆಂಕಟಸ್ವಾಮಿ ಇದ್ದರು.