Advertisement

ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಿ, ಬಾಲ ಕಾರ್ಮಿಕ ಪದ್ಧತಿ ನಿವಾರಿಸಿ

09:26 PM Jun 15, 2019 | Lakshmi GovindaRaj |

ಹಾಸನ: ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ನಿವಾರಣೆ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬಿ.ಎಸ್‌.ಶ್ವೇತಾ ಹೇಳಿದರು.

Advertisement

ನಗರದ ಅಂಬೇಡ್ಕರ್‌ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದೊಂದಿಗೆ ವಿಶ್ವ ಬಾಲ ಕಾರ್ಮಿಕರ ನಿರ್ಮೂಲನೆ ದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಎಲ್ಲರಿಗೂ ಶಿಕ್ಷಣ ಅಗತ್ಯ: ಶಿಕ್ಷಣ ಎಲ್ಲರಿಗೂ ತಲುಪುವ ನಿಟ್ಟಿನಲ್ಲಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನನ್ನು ಹೊಗಲಾಡಿಸಬೇಕು ಎಂದು ತಿಳಿಸಿದರು.

ಮಕ್ಕಳ ಗಣತಿಯ ಸಂದರ್ಭದಲ್ಲಿ ಬಾಲ ಕಾರ್ಮಿಕರನ್ನು ಗುರುತಿಸಿ ಅವರಿಗೆ ಅರಿವು ಮೂಡಿಸಬೇಕು, ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರು ಹಾಗೂ ಪ್ರಜ್ಞಾವಂತರು ಈ ನಿಟ್ಟಿನಲ್ಲಿ ಗಮನಹರಿಸಿ ಬಾಲ ಕಾರ್ಮಿಕ ಪದ್ಧತಿ ನಿಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.

ಶಿಕ್ಷಣವಿದ್ದಲ್ಲಿ ಶಿಸ್ತು ಇರುತ್ತದೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಎನ್‌. ವಿಜಯ ಪ್ರಕಾಶ್‌ ಮಾತನಾಡಿ, ಶಿಕ್ಷಣ ಇದ್ದಲ್ಲಿ ಶಿಸ್ತು ಇರುತ್ತದೆ. ಸಾಮಾಜಿಕ ನ್ಯಾಯ ಮತ್ತು ಭದ್ರತೆ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ಅಪಾಯಕಾರಿ ಉದ್ಯಮಗಳಲ್ಲಿ ತೊಡಗಿಕೊಂಡಿರುವ ಮಕ್ಕಳನ್ನು ರಕ್ಷಿಸುವುದು ಎಲ್ಲರ ಹೊಣೆಯಾಗಿದೆ ಎಂದರು.

Advertisement

ಬಾಲ ಕಾರ್ಮಿಕರು ತಂದೆ-ತಾಯಿಯ ಪ್ರೀತಿಯಿಂದ ವಂಚಿತರಾಗುತ್ತಾರೆ. ಅನೇಕ ಮಕ್ಕಳು ದೌರ್ಜನ್ಯಕ್ಕೆ ಒಳಗಾಗುತ್ತಾರೆ. ಇಂತಹ ಪ್ರಕರಣಗಳನ್ನು ತಡೆಯಬೇಕು. ಕೇವಲ ಬಾಲ ಕಾುìಕರನ್ನು ನಿಯೋಜಿಸಿಕೊಂಡ ಮಾಲಿಕರಲ್ಲದೆ, ಪೋಷಕರೂ ಕೂಡ 6 ತಿಂಗಳಿಂದ 2 ವರ್ಷಗಳವರೆಗೆ ಕಾನೂನಿನ ಪ್ರಕಾರ ಶಿಕ್ಷೆಗೆ ಗುರಿಯಾಗುತ್ತಾರೆ ಎಂದು ವಿಜಯ ಪ್ರಕಾಶ್‌ ಅವರು ಎಚ್ಚರಿಸಿದರು.

ಸಂಘಟನೆಗಳು ಶ್ರಮಿಸಲಿ: ಜಿಲ್ಲೆಯಲ್ಲಿ ಕಡಿಮೆ ಪ್ರಮಾಣದ ಬಾಲ ಕಾರ್ಮಿಕರ ಪ್ರಕರಣಗಳಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ ಅವರು, ಈ ವರ್ಷ ಸರ್ಕಾರದ ಧ್ಯೇಯವಾದ ಪೀಳಿಗೆಯ ರಕ್ಷಣೆ ಮತ್ತು ಆರೋಗ್ಯ ಘೋಷಣೆ ಗುರಿಯು ನಮ್ಮೆಲ್ಲರ ಮನೆ ಮಾತಾಗುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ವಿರೋಧಿಸುವಲ್ಲಿ ಇಲಾಖೆ ಹಾಗೂ ಇಲಾಖೇತರ ಸಂಘಟನೆಗಳು ಶ್ರಮಿಸಬೇಕು ಎಂದು ತಿಳಿಸಿದರು.

ಉಪ ಕಾರ್ಮಿಕ ಆಯುಕ್ತವೆಂಕಟೇಶ್‌ ಸಿಂದಿಹಟ್ಟಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ‌ ಟಿ. ಅರುಣ್‌ ಕುಮಾರ್‌, ಕ್ಷೇತ್ರ ಶೀಕ್ಷಣಾಧಿಕಾರಿ ಮಂಜುನಾಥ್‌, ಹಾಸನ ತಾಲೂಕು ಪಂಚಾಯಿತಿ ಅಧ್ಯಕ್ಷ ನಿಂಗೇಗೌಡ, ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜಾಥಾ ಉದ್ಘಾಟನೆ: ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆಯೋಜಿಸಿದ್ದ ಕಾಲ್ನಡಿಗೆ ಜಾಥಾ ಹಾಗೂ ಬೈಕ್‌ ರ್ಯಾಲಿಗೆ ಹಿರಿಯ ಸಿವಿಲ್‌ ನ್ಯಾಯಾಧೀಶ ಸಿ.ಕೆ.ಬಸವರಾಜು ಹಾಗೂ ಅಪರ ಜಿಲ್ಲಾಧಿಕಾರಿ ಎಂ.ಎಲ್‌ ವೈಶಾಲಿ ಅವರು ಚಾಲನೆ ನೀಡಿದರು.

ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಂ.ಶಿವಣ್ಣ, ಜಿಲ್ಲಾ ವಾರ್ತಾಧಿಕಾರಿ ವಿನೋದಚಂದ್ರ, ಕಾರ್ಮಿಕ ಅಧಿಕಾರಿ ರಮೇಶ್‌, ಸಮಾಜ ಸೇವಕಿ ಕೆ.ಟಿ.ಜಯಶ್ರೀ, ಪೌಲಸ್‌ ಮತ್ತಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next