Advertisement

ಎಸ್ಸಿ -ಎಸ್ಟಿ ಮಕ್ಕಳ ಶಿಕ್ಷಣಕ್ಕೆ ಒತ್ತು ಕೊಡಿ

04:17 PM Jan 26, 2018 | |

ವಿಜಯಪುರ: ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ಉಪಾಧ್ಯಕ್ಷ ಎಲ್‌.ಮುರುಗನ್‌ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Advertisement

ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಘಟಕ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಗಮನ ವಹಿಸಬೇಕು. ಸರ್ವ ಶಿಕ್ಷಣ ಅಭಿಯಾನ. ಆರ್‌ಟಿಇ ಅಡಿ ಮಕ್ಕಳಿಗೆ ಸಿಗುವ ಸೌಲಭ್ಯಗಳನ್ನು ಯೋಜನಾಬದ್ಧವಾಗಿ ದೊರಕಿಸುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದಲ್ಲಿರುವ ದೇವದಾಸಿ ಕುಟುಂಬಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅನೇಕ ದೂರುಗಳು ಬಂದ ಹಿನ್ನೆಲೆಯಲ್ಲಿ ದೇವದಾಸಿಯರ ಮತ್ತು ಅವರ ಮಕ್ಕಳ ಸ್ಥಿತಿಗತಿಗಳ
ಅಧ್ಯಯನ ಮತ್ತು ಸಮೀಕ್ಷೆ ನಡೆಸಲು ಸಮಿತಿ ರಚಿಸಲಾಗುತ್ತಿದೆ. ಒಂದು ತಿಂಗಳಲ್ಲಿ ಸಮಿತಿ ರಚಿಸಿ ಸೂಕ್ತ ಅಧ್ಯಯನ ನಡೆಸಿ ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಲಾಗುವುದು. ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೂ ಸಮಿತಿ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು. ದೇವದಾಸಿಯರ ಸುಶಿಕ್ಷಿತ ಮಕ್ಕಳಿಗೆ ಸೂಕ್ತ ಉದ್ಯೋಗಾವಕಾಶ ದೊರಕಿಸಬೇಕು.

ಅನಕ್ಷರಸ್ಥರಿರುವ ದೇವದಾಸಿ ಮಕ್ಕಳಿಗೆ ವಿವಿಧ ಕೈಗಾರಿಕೆಗಳಲ್ಲಿ ಮತ್ತು ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ವಿವಿಧ ಯೋಜನೆ ಅನುಷ್ಠಾನ ಸಂದರ್ಭದಲ್ಲಿ ಕೆಲಸ ದೊರಕಿಸಬಹುದಾಗಿದೆ. ಅವಶ್ಯಕತೆ ಇದ್ದಲ್ಲಿ ದಿನಗೂಲಿ ಆಧಾರದ ಮೇಲಿರುವ ಉದ್ಯೋಗಾವಕಾಶ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. 

ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಅನುದಾನ ಸಮಪರ್ಕವಾಗಿ ಬಳಕೆಯಾಗುವ ಜತೆಗೆ ಅರ್ಹ ಫಲಾನುಭವಿಗಳಿಗೆ ಸೂಕ್ತ ಸೌಲಭ್ಯ ದೊಕಿಸಿಕೊಡುವಂತೆ ಸೂಚಿಸಿದ ಅವರು, ಪರಿಶಿಷ್ಟ ಜಾತಿ ರೈತರ ಸ್ಥಿತಿಗತಿಗಳ, ದೊಡ್ಡ, ಮಧ್ಯಮ, ಸಣ್ಣ ರೈತರ ಎಕರೆವಾರು ಜಮೀನು ಇರುವ ಕುರಿತಂತೆ ಅಂಕಿ-ಅಂಶ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಪರಿಶಿಷ್ಟ ಜಾತಿ ಕಾಲೋನಿಗಳಿಗೆ ಸಿಸಿ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಸಮರ್ಪಕವಾಗಿ ದೊರೆಯುವಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಯಾವುದೇ ರೀತಿಯ ಬಾಲ್ಯವಿವಾಹ, ಜಾತಿ ನಿಂದನೆ, ದೌರ್ಜನ್ಯ ಸೇರಿದಂತೆ ಇತರೆ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು. ಪೊಲೀಸ್‌ ಇಲಾಖೆ ವ್ಯಾಪ್ತಿಯ ಪ್ರಕರಣಗಳ ಬಗ್ಗೆ ಸೂಕ್ತ ಗಮನ ಹರಿಸುವಂತೆಯೂ ಸಲಹೆ ನೀಡಿದರು.

ಪರಿಶಿಷ್ಟ ಜಾತಿ ಜನಾಂಗಕ್ಕೆ ಇರುವ ವಿವಿಧ ಸಾಲ, ಸ್ವಯಂ ಉದ್ಯೋಗ, ಪಿಂಚಣಿ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸಕಾಲಕ್ಕೆ ತಲುಪಿಸಬೇಕು. ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಸಂತ್ರಸ್ತರಿಗೆ ನಿಯಮಾವಳಿಯನ್ವಯ ಪರಿಹಾರ ದೊರೆಯುವಂತೆ ನೋಡಿಕೊಳ್ಳಬೇಕು. ಇತ್ತೀಚೆಗೆ ನಗರದಲ್ಲಿ ಅತ್ಯಾಚರಕ್ಕೊಳಗಾಗಿ ಸಾವನ್ನಪ್ಪಿದ್ದ ಬಾಲಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯಿಂದ ನಡೆಯುತ್ತಿರುವ ತನಿಖಾ ವರದಿ ಸ್ಥಿತಿ ಕುರಿತು ಸಮನ್ಸ್‌ ನೀಡಿ ಕೋರಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಸುಂದರೇಶಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಲದೀಪಕುಮಾರ ಜೈನ್‌, ಡಿಸಿಆರ್‌ಬಿ ಅಧೀಕ್ಷಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಸಭೆಯಲ್ಲಿ ಭಾಗವಹಿಸಿದ್ದರು.

ಬಾಲಕಿ ಮನೆಗೆ ಮುರುಗನ್‌ ಭೇಟಿ
ವಿಜಯಪುರ: ಇತ್ತೀಚೆಗೆ ವಿಜಯಪುರದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ ದಲಿತ ಬಾಲಕಿ ಮನೆಗೆ ಭಾರತ ಸರ್ಕಾರದ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ಉಪಾಧ್ಯಕ್ಷ ಎಲ್‌. ಮುರಗನ್‌ ಭೇಟಿ ನೀಡಿ ಕುಟುಂಬಕ್ಕೆ
ಸಾಂತ್ವನ ಹೇಳಿದರು. 

ಇದೇ ಸಂದರ್ಭದಲ್ಲಿ ಭಾರತ ಸರ್ಕಾರದ ಪರಿಶಿಷ್ಟ ಜಾತಿ ರಾಷ್ಟ್ರೀಯ ಆಯೋಗದ ವತಿಯಿಂದ ಬೇಕಾದ ಎಲ್ಲ ಸಹಕಾರವನ್ನು ಕುಟುಂಬಕ್ಕೆ ಒದಗಿಸಲಾಗುವುದು ಎಂದು ಹೇಳಿದರು. ಅಲ್ಲದೇ ಕುಟುಂಬದ ಸಮಸ್ಯೆಗಳ ಬಗ್ಗೆ ವಿಚಾರಿಸಿದರು. ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ, ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಎಂ. ಸುಂದರೇಶಬಾಬು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕುಲದೀಪಕುಮಾರ ಜೈನ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ
ಪೋತದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನಕುಮಾರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next