ಚಿಕ್ಕಮಗಳೂರು: ರಾಜ್ಯದಲ್ಲಿ ರೈತ ಬೆಳೆದ ಉತ್ಪನ್ನಗಳಿಗೆ ನಿಗದಿತ ಬೆಂಬಲ ಬೆಲೆ ಸಿಗಬೇಕು ಹಾಗೂ ಮಧ್ಯವರ್ತಿಗಳ ಸಂಪರ್ಕವಿಲ್ಲದೆ ರೈತರೇ ನೇರವಾಗಿ ಮಾರುಕಟ್ಟೆಯಲ್ಲಿ ವ್ಯವಹರಿಸುವ ಉದ್ದೇಶದಿಂದ ಎಪಿಎಂಸಿ ಮಾರುಕಟ್ಟೆ ಕಾಯ್ದೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.
ಮಂಗಳವಾರ ನಗರದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಕೃಷಿ ಉತ್ಪನ್ನಗಳ ಬೆಲೆ ಹಾಗೂ ದಾಸ್ತಾನು ಮಳಿಗೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು. ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಹಾಗೂ ಮಾರಾಟ ಮಾಡಲು ಪೂರ್ಣ ಸ್ವಾತಂತ್ರ್ಯ ಸಿಗಬೇಕು. ಉತ್ತಮ ಬೆಲೆ ಸಿಗುವ ಯಾವುದೇ ಭಾಗದಲ್ಲಿ ನಿಬಂಧನೆಗಳಿಲ್ಲದೇ ಮಾರಾಟ ಮಾಡುವ ಮೂಲಕ ರೈತರಿಗೆ ನೇರ ಲಾಭ ದೊರೆಯುವಂತೆ ಮಾಡುವ ಉದ್ದೇಶದಿಂದ ಎಪಿಎಂಸಿ ಕಾಯ್ದೆ ರೂಪಿಸಲಾಗುತ್ತಿದೆ. ಕೊರೊನಾ ಕಾರಣದಿಂದಾಗಿ ಜಾರಿಗೊಳಿಸುವುದು ತಡವಾಗಿದೆ ಎಂದರು. ರಾಜ್ಯದ ಎಪಿಎಂಸಿ ಬೋರ್ಡ್ ಗೆ ಪರವಾನಗಿ ನೀಡುವ ಅಧಿಕಾರವನ್ನು ನೀಡಿದ್ದು, ಇಲ್ಲಿ ಯಾವುದೇ ರೈತರಿಗೆ ತೊಂದರೆ ನೀಡುವ ಉದ್ದೇಶವಿಲ್ಲ ಎಂದ ಅವರು, ರೈತರ ಹಿತದೃಷ್ಟಿಯಿಂದ ಕಾಯ್ದೆಗಳನ್ನು ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.
ಜಿಲ್ಲೆಯಲ್ಲಿ ರೈತರ ಉತ್ಪನ್ನಗಳ ಹಿತದೃಷ್ಟಿಯಿಂದ ಶೀತ ಸಂಗ್ರಹಣ ದಾಸ್ತಾನು ಘಟಕಗಳನ್ನು (ಕೋಲ್ಡ್ ಸ್ಟೋರೇಜ್) ಸ್ಥಾಪಿಸುವಂತೆ ಕೇಳಿಕೊಂಡಿದ್ದು ಈ ಬಗ್ಗೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿ ಯಾವುದೇ ಕೃಷಿ ಉತ್ಪನ್ನ ಸಾಗಾಟಕ್ಕೆ ನಿರ್ಬಂಧವಿಲ್ಲ. ಎಲ್ಲಾ ಭಾಗದಿಂದಲೂ ಕೃಷಿ ಉತ್ಪನ್ನಗಳು ಆಮದು ಮತ್ತು ರಫ್ತು ಆಗುತ್ತಿವೆ. ರಾಜ್ಯದ ಕೆಲವೊಂದು ಡಿಸಿಸಿ ಬ್ಯಾಂಕ್‌ಗಳಲ್ಲಿ ರೈತರಿಗೆ ಸಾಲ ನೀಡುವ ವಿಚಾರದಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ತಂಡ ರಚಿಸಿ ಸೂಕ್ತ ತನಿಖೆ ನಡೆಸಲಾಗುವುದು. ಜಿಲ್ಲೆಗೆ ಒಬ್ಬರಂತೆ ಡೆಪ್ಯುಟಿ ಆಡಿಟರ್ ನೇಮಿಸಿ ರೈತರ ಹಿತ ಕಾಯಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಮಾತನಾಡಿ, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾರುಕಟ್ಟೆ ಕಾಯ್ದೆ ಜಾರಿಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಜನ ವಿರೋಧಿ ಕಾಯ್ದೆ ರೂಪಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದರು. ರೈತರು ಹಾಗೂ ವ್ಯಾಪಾರಿಗಳೊಂದಿಗೆ ನೇರ ಸಂಪರ್ಕ ಇರಬೇಕು.ಮಧ್ಯವರ್ತಿಗಳ ಹಾವಳಿ ತಡೆಯಬೇಕು. ರೈತ ಬೆಳೆದ ಬೆಳೆಗೆ ಸೂಕ್ತ ನಿಗದಿತ ಬೆಂಬಲ ಬೆಲೆ ಸಿಗಬೇಕು ಎನ್ನುವ ಉದ್ದೇಶದಿಂದ ಖಾಸಗಿ ವ್ಯಕ್ತಿಗಳ ಸಹಕಾರದಿಂದ ಈ ಕಾಯ್ದೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಬಳಿಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಹಾಗೂ ಸದಸ್ಯರೊಂದಿಗೆ ಸಭೆ ನಡೆಸಿದರು. ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಮಹೇಂದ್ರ, ಎ.ಪಿ.ಎಂ.ಸಿ. ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.