ಭಾಲ್ಕಿ: ಎಲ್ಲ ವಿದ್ಯಾರ್ಥಿಗಳಲ್ಲಿ ಅದ್ಭುತ ಶಕ್ತಿ, ಕಲಿಕಾ ಆಸಕ್ತಿ ಅಡಗಿರುತ್ತದೆ. ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಿಕ್ಷಕರಿಂದ ಆಗಬೇಕು. ಅಂದಾಗ ವಿದ್ಯಾರ್ಥಿಗಳಲ್ಲಿನ ನೈಜ ಪ್ರತಿಭೆ ಹೊರ ಬರಲು ಸಾಧ್ಯ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ| ಬಸವಲಿಂಗ ಪಟ್ಟದ್ದೇವರು ಹೇಳಿದರು.
ತಾಲೂಕಿನ ಕರಡ್ಯಾಳ ಗ್ರಾಮದ ಚನ್ನಬಸವೇಶ್ವರ ಗುರುಕುಲದಲ್ಲಿ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮಲ್ಲಿನ ಕೀಳರಿಮೆ ಬಿಟ್ಟು ಸದಾ ಉತ್ಸಾಹದ ಚಿಲುಮೆಗಳಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ಆಡಳಿತಾಧಿಕಾರಿ ಮೋಹನ ರೆಡ್ಡಿ ಮಾತನಾಡಿ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿಯೇ ದಾಖಲೆ ರೀತಿಯಲ್ಲಿ ಗುರುಕುಲದ 234 ವಿದ್ಯಾರ್ಥಿಗಳು ಅಗ್ರಶ್ರೇಣಿ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದರು.
ಪ್ರಾಚಾರ್ಯ ಬಸವರಾಜ ಮೊಳಕೀರೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ವೇಳೆ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 99ಕ್ಕಿಂತ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ನಿರ್ದೇಶಕ ಶಶಿಧರ ಕೋಸಂಬೆ, ಉದ್ಯಮಿ ರವೀಂದ್ರ ಚಿಡಗುಪ್ಪೆ, ಪತ್ರಕರ್ತ ಬಸವರಾಜ ಪ್ರಭಾ ಇದ್ದರು.