ಚಿತ್ತಾಪುರ: ಸರ್ಕಾರಿ ಶಾಲಾ ಮಕ್ಕಳು ಕೂಡ ಆರಂಭದಿಂದಲೇ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಅದರಲ್ಲೂ ಚಿತ್ತಾಪುರ ತಾಲೂಕಿನಲ್ಲಿ ಒಟ್ಟು 6 ಶಾಲೆಗಳನ್ನು ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಆಯ್ಕೆ ಮಾಡಿಕೊಂಡು ಶಿಕ್ಷಣ ನೀಡಲು ಮುಂದಾಗಿದೆ.
ಬಡವರ ಮಕ್ಕಳು ಇಂಗ್ಲಿಷ್ ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಸರ್ಕಾರ ಇಂತಹ ತಿರ್ಮಾನ ಕೈಗೊಂಡಿದ್ದು, ಪಟ್ಟಣ ಪ್ರದೇಶವಲ್ಲದೇ ಗ್ರಾಮೀಣ ಭಾಗದ ಪ್ರತಿಭಾವಂತ ಮಕ್ಕಳಿಗೂ ಅನುಕೂಲವಾಗಲಿದೆ. ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸುವ ಉದ್ದೇಶದಿಂದ ಖಾಸಗಿ ಶಾಲೆಗಳಿಗೆ ಮೋರೆ ಹೋಗುತ್ತಿದ್ದರಿಂದ ಸರ್ಕಾರಿ ಶಾಲೆಗಳಿಗೆ ಮಕ್ಕಳ ಸಂಖ್ಯೆ ಗಣನೀಯವಾಗಿ ಇಳಿಮುಖವಾಗುತ್ತಿರುವುದನ್ನು ಗಮನಿಸಿದ ಸರ್ಕಾರ, ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡಿ ಸರ್ಕಾರಿ ಶಾಲೆಗಳನ್ನು ಉಳಿಸಿಕೊಳ್ಳಬೇಕು. ಸರ್ಕಾರಿ ಶಾಲೆಗಳಲ್ಲಿಯೂ ಕೂಡಾ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಆಂಗ್ಲ ಮಾಧ್ಯಮದ ಮೂಲಕ ಮಕ್ಕಳಿಗೆ ಶಿಕ್ಷಣ ನೀಡಲು ಮುಂದಾಗಿರುವುದು ಬಡ ಪಾಲಕರಿಗೆ ವರದಾನವಾಗಿ ಪರಿಣಮಿಸಿದೆ.
ಒಟ್ಟು 6 ಶಾಲೆಗಳು: ತಾಲೂಕಿನಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣಕ್ಕೆ ಒಟ್ಟು 6 ಶಾಲೆಗಳನ್ನು ಆಯ್ಕೆ ಮಾಡಲಾಗಿದೆ. ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡತ ಬಜಾರ, ನಾಲವಾರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಮಾಲಗತ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬೆಡಸೂರನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಲಾಡ್ಲಾಪುರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಮಾಡಬೂಳದ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಪ್ರಸಕ್ತ 2019-20ನೇ ಸಾಲಿನಿಂದಲೇ ಒಂದನೇ ತರಗತಿ ಮಕ್ಕಳಿಗೆ ಪ್ರವೇಶ ಪ್ರಾರಂಭಿಸಲಾಗಿದೆ.
ಸರ್ಕಾರದ ಈ ನಿರ್ಧಾರಕ್ಕೆ ಪಾಲಕರು ಹಾಗೂ ಶಿಕ್ಷಣ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದು, ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಕಲಿಕೆಯೂ ಬಡ ವಿದ್ಯಾರ್ಥಿಗಳಿಗೆ ಮತ್ತು ಪಾಲಕರಿಗೆ ತುಂಬಾ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಈ ಒಂದನೇ ತರಗತಿ ಆಂಗ್ಲ ಮಾಧ್ಯಮ ಕಲಿಕೆಯನ್ನು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಡ್ಡಾಯಗೊಳಿಸಿದಾಗ ಮಾತ್ರ ಸರ್ಕಾರಿ ಶಾಲೆಗಳತ್ತ ಎಲ್ಲಾ ವರ್ಗದ ಜನರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಲು ಮುಂದಾಗುತ್ತಾರೆ. ಇದರಿಂದ ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಕೊರತೆ ನಿವಾರಣೆಯಾಗುವ ಮೂಲಕ ಶಾಲೆಗಳು ಉಳಿಯುತ್ತವೆ ಎನ್ನುವುದು ಶಿಕ್ಷಣ ಪ್ರೇಮಿಗಳ ಹಾಗೂ ಸಾರ್ವಜನಿಕರ ಅಭಿಪ್ರಾಯವಾಗಿದೆ.
•ಎಂ.ಡಿ ಮಶಾಖ