ಬೆಂಗಳೂರು: ಕಾವೇರಿ ನದಿ ನೀರು ವಿಚಾರವಾಗಿ ನಡೆಯುತ್ತಿರುವ ಹೋರಾಟದ ವಿಷಯವಾಗಿ ಜೆಡಿಎಸ್ ನಾಯಕ ಮತ್ತು ಚಿತ್ರ ನಟ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿತೆ ನೀಡಿದ್ದು, ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು ಎಂದು ಗುಡುಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಕಾವೇರಿ ಕನ್ನಡಿಗರ ಹಕ್ಕು. ಕಾವೇರಿ ಕನ್ನಡಿಗರ ಜೀವನಾಡಿ, ಈ ವಿಷಯದಲ್ಲಿ ಅನ್ಯಾಯ ಸಹಿಸುವುದಿಲ್ಲ ಹಾಗೂ ರಾಜಿ ಪ್ರಶ್ನೆಯೇ ಇಲ್ಲ. ರಾಜ್ಯ ಕಾಂಗ್ರೆಸ್ ಸರಕಾರ ಈ ಬಗ್ಗೆ ಆಡುತ್ತಿರುವ ಕಪಟ ನಾಟಕ ಸಾಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸುವ ಯಾವುದೇ ಕೃತ್ಯವನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:Diplomatic crisis: ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸ್ಥಗಿತಗೊಳಿಸಿದ ಸರ್ಕಾರ
ರಾಜ್ಯದಲ್ಲಿ ನೀರಿನ ಕೊರತೆ ಇದೆ ಮಳೆ ಕೈಕೊಟ್ಟಿದೆ. ಜಲಾಶಯಗಳು ಬರಿದಾಗಿವೆ. ಆದರೂ ತಮಿಳುನಾಡಿಗೆ ರಾಜ್ಯ ಸರಕಾರ ಏಕಪಕ್ಷೀಯವಾಗಿ ನೀರು ಹರಿಸಿದ್ದು ಅಕ್ಷಮ್ಯ. ಬ್ರಿಟೀಷರ ಕಾಲದಲ್ಲಿಯೇ ಶುರುವಾದ ಅನ್ಯಾಯದ ಪರಂಪರೆಯನ್ನು ನಮ್ಮ ರಾಜ್ಯ ಸರಕಾರವೇ ಮುಂದುವರಿಸಿದೆ ಎಂದು ಟೀಕಿಸಿದ್ದಾರೆ.
ಸ್ವಾತಂತ್ರ್ಯ ನಂತರವೂ ಮುಂದುವರಿದಿದೆ. ಕಾಂಗ್ರೆಸ್ ಪಕ್ಷಕ್ಕೆ ಕಾವೇರಿ ಎನ್ನುವುದು ರಾಜಕೀಯ ಲಾಭದ ವಸ್ತುವಂತೆ ಆಗಿರುವುದು ನೋವಿನ ಸಂಗತಿ. ಕಾವೇರಿ ವಿಷಯದಲ್ಲಿ ಕನ್ನಡಿಗರ ನಿಲುವೇ ನನ್ನ ನಿಲುವು. ಆರೂವರೆ ಕೋಟಿ ಕನ್ನಡಿಗರ ದನಿಯೇ ನನ್ನ ದನಿ. ತಾಯಿ ಕಾವೇರಿಗಾಗಿ ಯಾವುದೇ ಹೋರಾಟಕ್ಕೆ ನಾನು ಸಿದ್ಧನಿದ್ದೇನೆ ಎಂದು ನಿಖಿಲ್ ಹೇಳಿದ್ದಾರೆ.