Advertisement

ಇಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

11:39 AM Mar 20, 2022 | Team Udayavani |

ಬಾಗಲಕೋಟೆ: ಜಿಲ್ಲೆಯಲ್ಲಿ ಮಾ. 20ರಂದು ವಸತಿ ಶಾಲೆಗಳ ಪ್ರವೇಶಾತಿಗಾಗಿ ಪ್ರವೇಶ ಪರೀಕ್ಷೆ ನಡೆಯಲಿದ್ದು, ಒಟ್ಟು 12384 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್‌ ಡಾ| ಕೆ.ರಾಜೇಂದ್ರ ಹೇಳಿದರು.

Advertisement

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಪ್ರವೇಶ ಪರೀಕ್ಷೆ ಕುರಿತು ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರವೇಶ ಪರೀಕ್ಷೆಗೆ ಜಿಲ್ಲೆಯಲ್ಲಿ ಬಾಗಲಕೋಟೆ 5, ಜಮಖಂಡಿ 4, ಬಾದಾಮಿ 3, ಮುಧೋಳ 5, ಬೀಳಗಿ 5, ಹುನಗುಂದ 2, ಇಳಕಲ್ಲ 2 ಹಾಗೂ ಬನಹಟ್ಟಿ 3 ಸೇರಿದಂತೆ ಒಟ್ಟು 29 ಪರೀಕ್ಷಾ ಕೇಂದ್ರ ಸ್ಥಾಪಿಸಲಾಗಿದ್ದು, 12384 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷಾ ಕಾರ್ಯಕ್ಕೆ 546 ಮೇಲ್ವಿಚಾರಕರು, ಉಪ ಮುಖ್ಯ ಅಧೀಕ್ಷಕರು, ವೀಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿಭಾಯಿಸಬೇಕು. ಪರೀಕ್ಷೆ ಸುಸೂತ್ರವಾಗಿ ನಡೆಯಲು ಎಲ್ಲ ರೀತಿಯ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ಆಯಾ ಕಾಲೇಜಿನ ಪ್ರಾಚಾರ್ಯರನ್ನೆ ಉಪ ಮುಖ್ಯ ಅಧೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರು, ರಾಜ್ಯ ಪರೀಕ್ಷಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ನಿರ್ದೇಶಕರು ಹಾಗೂ ಉಪನಿರ್ದೇಶಕರು ನೀಡುವ ಸೂಚನೆ ಕಡ್ಡಾಯವಾಗಿ ಪಾಲಿಸಬೇಕು ಎಂದರು.

ಪರೀಕ್ಷಾ ಕೊಠಡಿ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತರಬೇತಿ ನೀಡುವುದು, ಕೊಠಡಿ ಮೇಲ್ವಿಚಾರಕರು ಮತ್ತು ಕಚೇರಿ ಸಿಬ್ಬಂದಿಗಳು ಮೊಬೈಲ್‌ ಬಳಸದಂತೆ ನೋಡಿಕೊಳ್ಳಬೇಕು. ಕೊಠಡಿಗಳಿಗೆ ಲಾಟರಿ ಮೂಲಕ ಮೇಲ್ವಿಚಾರಕರಿಗೆ ಹಂಚಲು ಕ್ರಮ ವಹಿಸಲು ತಿಳಿಸಿದ ಅವರು, ನೇಮಕಗೊಂಡ ಸಿಬ್ಬಂದಿ ಹೊರತುಪಡಿಸಿ ಬೇರೆ ಯಾವುದೇ ವ್ಯಕ್ತಿ ಪರೀಕ್ಷಾ ಕೇಂದ್ರದಲ್ಲಿ ಇರದಂತೆ ನೋಡಿಕೊಳ್ಳುವ ಕೆಲಸ ಉಪ ಮುಖ್ಯ ಅಧೀಕ್ಷಕರದ್ದಾಗಿದೆ ಎಂದು ತಿಳಿಸಿದರು.

Advertisement

ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಒಬ್ಬ ಅಧಿಕಾರಿಯನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 8 ಸ್ಥಳಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ತಲುಪಿಸಲು ತಹಶೀಲ್ದಾರ್‌ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸರಕಾರಿ ಕಾಲೇಜುಗಳ ಪ್ರಾಚಾರ್ಯರನ್ನೊಳಗೊಂಡ ತಂಡ ರಚಿಸಲಾಗಿದ್ದು, ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆ ಬಂಡಲ್‌ಗ‌ಳನ್ನು ತಲುಪಿಸುವ ಕಾರ್ಯವಾಗಬೇಕು ಎಂದರು. ಪರೀಕ್ಷಾ ಕೇಂದ್ರಕ್ಕೆ ಸೂಕ್ತ ಪೊಲೀಸ್‌ ಬಂದೋಬಸ್ತ್ ವ್ಯವಸ್ಥೆ, ಪ್ರಶ್ನೆ ಪತ್ರಿಕೆ ಸಾಗಾಣಿಕೆ ತಂಡಕ್ಕೆ ಸೂಕ್ತ ಎಸ್ಕಾರ್ಟ್‌ ವ್ಯವಸ್ಥೆಗೆ ಪೊಲೀಸ್‌ ಇಲಾಖೆಗೆ ತಿಳಿಸಲಾಗುವುದು.

ಪರೀಕ್ಷಾ ಕೇಂದ್ರದ ಸುತ್ತ ಮುತ್ತ ಕಲಂ 144 ರಡಿ 200 ಮೀಟರ್‌ನ್ನು ನಿಷೇದಿತ ಪ್ರದೇಶವೆಂದು ಘೋಷಿಸಿ, ಆದೇಶ ಹೊರಡಿಸಲಾಗುತ್ತದೆ. ಅಲ್ಲದೇ ಪರೀಕ್ಷಾ ಅವಧಿಯಲ್ಲಿ ಝೆರಾಕ್ಸ್‌ ಅಂಗಡಿ ಮುಚ್ಚಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಕೃಷ್ಣಾ ಎಂ., ತಹಶೀಲ್ದಾರ್‌ ಗುರುಸಿದ್ದಯ್ಯ ಹಿರೇಮಠ ಸೇರಿದಂತೆ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next