ಶಿಡ್ಲಘಟ್ಟ: ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಮಂಜುನಾಥ್ ಗೌಡ ಹಾಗೂ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ರಾಜೀವ್ ಗೌಡ ಅವರಿಗೆ ಟಿಕೆಟ್ ಕೊಡುವ ಭರವಸೆಯನ್ನೂ ನೀಡಿಲ್ಲ ಎಂದು ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ ಈ ವಿಷಯವನ್ನು ಸ್ಪಷ್ಟಪಡಿಸಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ಯಾರು ಗೊಂದಲಕ್ಕೆ ಒಳಗಾಗುವುದು ಬೇಡ ಎಂದರು.
ಕೋಲಾರ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಿಗೆ ಕಳೆದ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿತ್ತು ಆದರೆ ಅಭ್ಯರ್ಥಿ ಪರಾಭವಗೊಂಡಿದ್ದರು ಮುಂಬರುವ 2023ರ ವಿಧಾನಸಭೆಯ ಚುನಾವಣೆಗೆ ಅಲ್ಪಸಂಖ್ಯಾತರು ಒಕ್ಕಲಿಗರು ಹಾಗೂ ಹಿಂದುಳಿದ ವರ್ಗಗಳ ಮುಖಂಡರು ಟಿಕೆಟ್ ಕೇಳುತ್ತಿದ್ದಾರೆ ಇನ್ನು ಹಲವರು ಪಕ್ಷ ಸಂಘಟನೆ ಮಾಡುವ ಕಾರ್ಯದಲ್ಲಿ ತೊಡಗಿದ್ದಾರೆ ಎಲ್ಲಿಯೂ ಯಾವ ಕ್ಷೇತ್ರದಲ್ಲೂ ಸಹ ಟಿಕೆಟ್ ನೀಡುವ ಭರವಸೆಯನ್ನೂ ನೀಡಿಲ್ಲ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿ ಪಕ್ಷದ ವರಿಷ್ಠರು ಟಿಕೆಟ್ ಹಂಚಿಕೆ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.
ಪಕ್ಷದ ವರಿಷ್ಠರು ಬಯಸಿದರೆ ಮುಂಬರುವ ವಿಧಾನಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿ ರಾಜ್ಯ ರಾಜಕಾರಣಕ್ಕೆ ಎಂಟ್ರಿ ಮಾಡುತ್ತೇನೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಚುನಾವಣೆಯಲ್ಲಿ ಸ್ಪರ್ಧಿಸುವ ಇಂಗಿತವನ್ನು ವ್ಯಕ್ತಪಡಿಸಿದರು.
ಇದೇ ವೇಳೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಎಬಿಡಿ ಗ್ರೂಪಿನ ಅಧ್ಯಕ್ಷ ರಾಜೀವ್ ಗೌಡ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಸಿಆರ್ ಮನೋಹರ್ ಅವರಿಗೆ ಸಮಾಲೋಚನೆ ನಡೆಸಿ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದಾರೆ.