ನವದೆಹಲಿ: ಸುಮಾರು 28 ಸಂಸದರನ್ನು ಒಳಗೊಂಡ ಯುರೋಪಿಯನ್ ಸಂಸದೀಯ ನಿಯೋಗ ಮಂಗಳವಾರ(ಅಕ್ಟೋಬರ್ 29) ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದಲ್ಲಿನ ವಸ್ತು ಸ್ಥಿತಿಯ ಬಗ್ಗೆ ಯುರೋಪಿಯನ್ ಸಂಸದೀಯ ನಿಯೋಗ ಭೇಟಿ ನೀಡುವ ಮೂಲಕ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯುವಲ್ಲಿ ಇದು ಸಹಕಾರಿಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಜಮ್ಮು-ಕಾಶ್ಮೀರದ ಪರಿಸ್ಥಿತಿ ಕುರಿತು ಯುರೋಪಿಯನ್ ನಿಯೋಗ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿತ್ತು ಎಂದು ವರದಿ ತಿಳಿಸಿದೆ. ಅಲ್ಲದೇ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರನ್ನು ಭೇಟಿಯಾಗಿ ನಿಯೋಗ ಮಾತುಕತೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಿದೆ.
ಆಗಸ್ಟ್ 5ರಂದು ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಈ ನಿರ್ಧಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಚರ್ಚೆಗೆ ಗುರಿಯಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು ಯುರೋಪಿಯನ್ ನಿಯೋಗವನ್ನು ಸ್ವಾಗತಿಸಿದ್ದು, ಜಮ್ಮು-ಕಾಶ್ಮೀರ ಸೇರಿದಂತೆ ದೇಶದ ವಿವಿಧ ಭಾಗಗಳ ಭೇಟಿ ಫಲಪ್ರದವಾಗಲಿದೆ ಎಂದು ವಿಶ್ವಾಸವ್ಯಕ್ತಪಡಿಸಿರುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ಯುರೋಪಿಯನ್ ನಿಯೋಗ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಗೆ ಭೇಟಿ ನೀಡುವ ಮೂಲಕ ಅಲ್ಲಿನ ಸಾಂಸ್ಕೃತಿಕ, ಧಾರ್ಮಿಕ ವೈವಿಧ್ಯತೆಯ ಬಗ್ಗೆ ತಿಳಿದುಕೊಳ್ಳಲು ಸಾಧ್ಯವಾಗಲಿದೆ. ಅಲ್ಲದೇ ಈ ಪ್ರದೇಶದ ಅಭಿವೃದ್ಧಿ ಮತ್ತು ಆಡಳಿತಕ್ಕೆ ನೀಡಬೇಕಾದ ಪ್ರಾಮುಖ್ಯತೆ ಬಗ್ಗೆ ಸ್ಪಷ್ಟ ನೋಟ ನೀಡಲು ಸಾಧ್ಯವಾಗಲಿದೆ ಎಂದು ತಿಳಿಸಿದೆ.