ವಿಧಾನಸಭೆ: ಸಿಎಂ ಸಿದ್ದರಾಮಯ್ಯ ಬಜೆಟ್ ಉತ್ತರಕ್ಕೆ ಪ್ರತಿಭಟನೆಯ ಬಿಸಿ ಮುಟ್ಟಿಸಿರುವ ಬಿಜೆಪಿ-ಜೆಡಿಎಸ್ ಸದಸ್ಯರು, ಉತ್ತರ ಪೂರ್ಣಗೊಳ್ಳುವುದಕ್ಕೆ ಮುನ್ನವೇ ಸಭಾತ್ಯಾಗ ನಡೆಸಿ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.
ಭಾಷಣ ಆರಂಭಿಸುತ್ತಿದ್ದಂತೆ ಸಿದ್ದರಾಮಯ್ಯ ಅವರಿಗೆ ಅಡಚಣೆ ಮಾಡಲಾರಂಭಿಸಿದ ಬಿಜೆಪಿ ಸದಸ್ಯರು ತರಹೇವಾರಿ ಘೋಷಣೆ ಕೂಗಿದರು. ಒಂದು ಹಂತದಲ್ಲಿ ತಾಳ್ಮೆ ಕಳೆದುಕೊಂಡ ಸಿದ್ದರಾಮಯ್ಯ, “ಇವರ ಮೇಲೆ ಕ್ರಮ ತೆಗೆದುಕೊಳ್ಳಿ’ ಎಂದು ಸ್ಪೀಕರ್‌ಗೆ ಆಗ್ರಹಿಸಿದರು.
ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ್, ಈ ಸರ್ಕಾರಕ್ಕೆ ನೈತಿಕತೆ ಇದ್ದಿದ್ದರೆ ತಕ್ಷಣ ರಾಜೀನಾಮೆ ನೀಡಬೇಕಿತ್ತು. ಈ ಹಿನ್ನೆಲೆಯಲ್ಲಿ ನಾವು ರಾಜಭವನಕ್ಕೆ ತೆರಳಿ ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆಂದು ಹೇಳಿದರು. ಬಳಿಕ ಎರಡೂ ಪಕ್ಷದ ಶಾಸಕರು ಕಾಲ್ನಡಿಗೆಯಲ್ಲೇ ರಾಜಭವನಕ್ಕೆ ತೆರಳಿ ದೂರು ಸಲ್ಲಿಸಿದರು.
ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅಶೋಕ, ಅಲ್ಪಸಂಖ್ಯಾತರನ್ನು ಓಲೈಸಲು ಕಾಂಗ್ರೆಸ್ ಸರ್ಕಾರ ಕೋಟ್ಯಂತರ ರೂ. ಮೌಲ್ಯದ ಜಾಗವನ್ನು ಅಲ್ಪಸಂಖ್ಯಾತರ ಇಲಾಖೆಗೆ ನೀಡಿದೆ. ಈ ಆದೇಶವನ್ನು ಕೂಡಲೇ ರದ್ದು ಮಾಡಬೇಕೆಂದು ಆಗ್ರಹಿಸಿದರು.
ಈ ಸರ್ಕಾರ ಕಳೆದ ಒಂಬತ್ತು ತಿಂಗಳಿಂದ ಅಲ್ಪಸಂಖ್ಯಾತರನ್ನು ಓಲೈಸುವ ನಿರ್ಧಾರಗಳನ್ನೇ ಮಾಡುತ್ತಿದೆ. ಮತಕ್ಕಾಗಿ ಸರ್ಕಾರದ ಆಸ್ತಿಗಳನ್ನು ಅಲ್ಪಸಂಖ್ಯಾತರ ಇಲಾಖೆಗೆ ವರ್ಗಾವಣೆ ಮಾಡಲಾಗುತ್ತಿದೆ. ಕುವೆಂಪು ವಾಣಿ ತೆಗೆದುಹಾಕುವ, ನಾಡಗೀತೆ ಕಡ್ಡಾಯದಿಂದ ವಿನಾಯಿತಿ ನೀಡುವ, ಪಾಕಿಸ್ತಾನಕ್ಕೆ ಜೈಕಾರ ಹಾಕಲು ಅವಕಾಶ ಮಾಡುವಂತಹ ನೀಚ ಕೆಲಸಗಳನ್ನು ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಪ್ರತ್ಯೇಕವಾಗಿ ರಾಜ್ಯಪಾಲರ ಭೇಟಿ ಮಾಡಿದ ಅಶೋಕ:
ಮಹತ್ವದ ಬೆಳವಣಿಗೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಪ್ರತ್ಯೇಕವಾಗಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜ್ಯದ ಪ್ರಸ್ತುತ ಸ್ಥಿತಿಗತಿ ಹಾಗೂ ಕಾನೂನು-ಸುವ್ಯವಸ್ಥೆ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಹಾಕಿರುವುದೂ ಸೇರಿ ಅನೇಕ ಸಂಗತಿಗಳನ್ನು ರಾಜ್ಯಪಾಲರ ಗಮನಕ್ಕೆ ತಂದರು.