ದೇವನಹಳ್ಳಿ: ಮಕ್ಕಳು ಬಾಲ್ಯವನ್ನು ಅನುಭವಿಸುವ ಹಕ್ಕನ್ನು ಹೊಂದಿದ್ದು, ಬಾಲ ಕಾರ್ಮಿಕ ಪದ್ಧತಿಯನ್ನು ಪ್ರೋತ್ಸಾಹಿಸದೆ, ಬಾಲ ಕಾರ್ಮಿಕರ ಸಂರಕ್ಷಣೆಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಹೇಳಿದರು.
ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ರಾಷ್ಟ್ರೀಯ ಬಾಲಕಾರ್ಮಿಕರ ಯೋಜನೆ ಆಶ್ರಯದಲ್ಲಿ ಏರ್ಪಡಿಸಿದ್ದ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ಕುರಿತು ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಯ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರಮ ಕೈಗೊಳ್ಳಬೇಕು: ಬಡತನ, ವಲಸೆ, ಅನಕ್ಷರತೆ ಮುಂತಾದ ಕಾರಣಗಳಿಂದ ಕಾರ್ಮಿಕ ಕ್ಷೇತ್ರದಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನು ಜೀವಂತವಾಗಿದೆ. ಈ ಪದ್ಧತಿ ನಿರ್ಮೂಲನೆಗಾಗಿ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸಲಾಗಿದ್ದು, 14 ವರ್ಷದೊಳಗಿನ ಮಕ್ಕಳು ಹಾಗೂ 18 ವರ್ಷದೊಳಗಿನ ಕಿಶೋರ ರನ್ನು ಉದ್ದಿಮೆ, ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದ್ದಲ್ಲಿ, ಕಠಿಣ ಕ್ರಮ ಕೈಗೊಂಡು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಲಾಗುತ್ತದೆ. ಬಾಲ ಕಾರ್ಮಿಕರ ರಕ್ಷಣೆಗಾಗಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಪ್ರಮಾಣವಚನ ಬೋಧನೆ: ತರಬೇತಿ ಕಾರ್ಯಾಗಾರದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ ಈ. ರವಿಕುಮಾರ್ ಬಾಲಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತ ಪ್ರಮಾಣವಚನ ಬೋಧಿಸಿದರು.
ಕಾರ್ಯಾಗಾರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂದೀಪ್ ಸಾಲಿಯಾನ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರಾಮು ಜೋಗಿಹಳ್ಳಿ, ಜಿಪಂ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಸುಬ್ಟಾರಾವ್. ಎಸ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳು, ತಾಲೂಕು ಕಾರ್ಮಿಕ ನಿರೀಕ್ಷಕರು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇದ್ದರು.