ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅವಶ್ಯವಿರುವ ಪ್ರತಿಯೊಬ್ಬರಿಗೂ ಆರೋಗ್ಯ ಸೌಲಭ್ಯ ದೊರೆಯಬೇಕು. ಈ ನಿಟ್ಟಿನಲ್ಲಿ ಏ.10ರಂದು ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣೆ ಎಐಟಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಸಿ.ಟಿ.ರವಿ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲಾಡಳಿತ, ಆದಿಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘ ಮತ್ತು ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಏ.10ರಂದು ಆರೋಗ್ಯ ಮೇಳ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಆರೋಗ್ಯ ಮೇಳದಲ್ಲಿ ಭಾಗವಹಿಸುವವರ ನೋಂದಣಿ ಪಂಚಾಯತ್ ಮಟ್ಟದಲ್ಲಿ ನಡೆಯಬೇಕು. ನೋಂದಣಿ ಮಾಡಿಕೊಂಡವರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಬೇಕು. ಪ್ರತ್ಯೇಕ ವಿಭಾಗಗಳನ್ನು ತೆರೆಯಬೇಕು. ಜನರಿಗೆ ಗೊಂದಲವಾಗದಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಆರೋಗ್ಯ ಮೇಳಕ್ಕೆ ಸಂಬಂಧಿ ಸಿದಂತೆ ಮೂರು ಕಮಿಟಿಗಳನ್ನು ರಚಿಸಲಾಗಿದೆ. ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಚ್. ಅಕ್ಷಯ್ ಮಾತನಾಡಿ, ಕೋವಿಡ್ ಸೋಂಕು ಬಳಿಕ ಜನರಲ್ಲಿ ಅನೇಕ ದೈಹಿಕ ಸಮಸ್ಯೆಗಳು ಉದ್ಬವಿಸಿದ್ದು, ಈ ಹಿನ್ನೆಲೆಯಲ್ಲಿ ಶ್ವಾಸಕೋಶ ತಜ್ಞರು, ಮನೋಶಾಸ್ತ್ರಜ್ಞರು, ಹೃದಯ ತಜ್ಞರು ಮೇಳದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಆರ್. ರೂಪಾ, ಉಪವಿಭಾಗಾಧಿಕಾರಿ ಡಾ|ಎಚ್. ಎಲ್. ನಾಗರಾಜ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಉಮೇಶ್, ಆದಿ ಚುಂಚನಗಿರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳು ಇದ್ದರು.