ರಾಮನಗರ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರಬ್ಬರ್ ಸ್ಟಾೃಂಪೋ, ಐರನ್ ಸ್ಟಾೃಂಪೊ ನನಗೆ ಗೊತ್ತಿಲ್ಲ. ಈಗಷ್ಟೇ ಮುಖ್ಯಮಂತ್ರಿ ಸ್ಥಾನ ಅಲಂಕರಿಸಿದ್ದಾರೆ. ಹಿಂದಿನ ಸರ್ಕಾರದಲ್ಲಾದ ಲೋಪ ದೋಷಗಳನ್ನು ಸರಿಪಡಿಸಿಕೊಂಡು ಉತ್ತಮ ಆಡಳಿತ ನೀಡುತ್ತಾರೊ ಎಂಬುದನ್ನು ಕಾದು ನೋಡೋಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರ ಸ್ವಾಮಿ ಪ್ರತಿಕ್ರಿಯಿಸಿದರು.
ನಗರದಲ್ಲಿ ಜಿಲ್ಲಾಡಳಿತ ಮತ್ತು ಅರಣ್ಯ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರಲ್ಲ ಎಂಬ ಪ್ರಶ್ನೆಗೆ ಅಯ್ಯೋ ಪಾಪ ಏನೊ ಹೋಗಿದ್ದಾರೆ. ಅವರ ಭವಿಷ್ಯ ಒಳ್ಳೆಯದಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.
ಜಿಲ್ಲೆಯಲ್ಲಿ ಕಾಡು ಪ್ರಾಣಿಗಳು – ಮಾನವ ಸಂಘರ್ಷಕ್ಕೆ ಕಡಿವಾಣ ಹಾಕಲು ಬನ್ನೇರುಘಟ್ಟದಿಂದ ಕೊಡಗಿನವರೆಗೆ ಕಾಡಂಚಿನಲ್ಲಿ ಬೇಲಿ ನಿರ್ಮಿಸಲು ಸುಮಾರು 500 ಕೋಟಿ ರೂ ಅಗತ್ಯವಿದ್ದು, ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ತಾವು ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ಅವರು ಸುದ್ದಿಗಾರರ ಮತ್ತೊಂದು ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಪ್ರತಿನಿತ್ಯ ವನ್ಯ ಪ್ರಾಣಿ ಮತ್ತು ಮಾನವನ ಸಂಘರ್ಷ ನಡೆಯುತ್ತಲೇ ಇದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾಡಂಚಿನಲ್ಲಿ ಬೇಲಿ ನಿರ್ಮಿಸುವ ಅಗತ್ಯವಿದೆ ಎಂದರು.
ಅರಣ್ಯ ಇಲಾಖೆ ಮಾತ್ರವಲ್ಲದೆ ಬಹುತೇಕ ಸರ್ಕಾರಿ ಇಲಾಖೆಗಳಲ್ಲಿ ಹುದ್ದೆಗಳು ಖಾಲಿಯಿವೆ. ಕಳೆದ ಏಳೆಂಟು ವರ್ಷಗಳಿಂದ ಸರ್ಕಾರಿ ನೌಕರರ ನೇಮಕಾತಿ ಪ್ರಕ್ರಿಯೆ ನಡೆದಿಲ್ಲ. ಅಂದಾಜಿನ ಪ್ರಕಾರ 2 ರಿಂದ 2.50 ಲಕ್ಷ ಹುದ್ದೆಗಳು ಖಾಲಿಯಿವೆ. ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಒತ್ತು ನೀಡಬೇಕು ಎಂದು ಹೇಳಿದರು.