ಬೆಂಗಳೂರು: ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಸಲೂ ನಿರ್ಧರಿಸಿದೆ.
ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್ ಸಂದರ್ಭದಲ್ಲಿ ಆನ್‌ಲೈನ್ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್/ಆಪ್‌ಲೈನ್) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂದು ಅವರು ವಿವರಿಸಿದರು.
ಪದವಿ ವಿದ್ಯಾರ್ಥಿಗಳಿಗೆ ಸಪ್ಟೆಂಬರ್ ನಂತರ ಆನ್ ಲೈನ್ ಶಿಕ್ಷಣ ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದಿದ್ದಾರೆ. ಹಾಗೆಯೇ ಸಿಇಟಿ ಪರೀಕ್ಷೆಯು ಪೂರ್ವ ನಿಗದಿಯಂತೆ ಜುಲೈ 30 ಮತ್ತು 31 ರಂದು ನಡೆಯಲಿವೆ ಎಂದು ಸ್ಪಷ್ಟಪಡಿಸಿದರು.