ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಅ. 4ಕ್ಕೆ ಮುಂದೂಡಿದೆ.
ಸಿಸೋಡಿಯಾ ಅವರ ಪತ್ನಿಯ ಆರೋಗ್ಯ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಕೋರಿರುವುದರಿಂದ ಈ ವಿಚಾರದಲ್ಲಿ ತುರ್ತು ಅಗತ್ಯವಿದೆ ಎಂದು ಸಿಸೋಡಿಯಾ ಪರ ವಕೀಲ ಅಭಿಷೇಕ್ ಸಿಂಘ್ವಿ ನ್ಯಾಯಾಲಯಕ್ಕೆ ತಿಳಿಸಿದರು.
ಸರ್ಕಾರದ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳು ನಡೆದಿದ್ದು, ಇದಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಫೆಬ್ರವರಿ 26 ರಂದು ಸಿಬಿಐ ಮತ್ತು ಇಡಿ ಅಧಿಕಾರಿಗಳು ಬಂಧಿಸಿದ್ದರು.
ಸಿಸೋಡಿಯಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಅವರು ವಾದಿಸಲು ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದರು.
ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ವಿಚಾರಣೆಯನ್ನು ಅ. 4ಕ್ಕೆ ಮುಂದೂಡಿತು.