ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ನ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಸಂಭವಿಸಿದ ಬಾಂಬ್ ಸ್ಫೋಟಕ್ಕೆ 12 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ(ಮೇ 14) ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಕೋವಿಡ್ ಸಂಕಷ್ಟಕ್ಕೆ ಮಿಡಿದ ತಲೈವಾ : ಒಂದು ಕೋಟಿ ರೂ. ನೆರವು ನೀಡಿದ ರಜನಿ
ಕಾಬೂಲ್ ಪೊಲೀಸ್ ವಕ್ತಾರ ಫಿರ್ದೌಸ್ ಫರ್ಮಾರ್ಝ್ ಮಾಹಿತಿ ಪ್ರಕಾರ, ಮಸೀದಿಯೊಳಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಇಮಾಮ್ ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದು, ಇತರ ಹದಿನೈದು ಮಂದಿ ಗಾಯಗೊಂಡಿರುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಫಿರ್ದೌಸ್, ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ ಮಸೀದಿಯ ಇಮಾಮ್ ದಾಳಿಕೋರರ ಮುಖ್ಯ ಗುರಿಯಾಗಿದ್ದರು ಎಂದು ವಿವರಿಸಿದ್ದಾರೆ. ಈದ್ ಉಲ್ ಫಿತರ್ ನ ಎರಡನೇ ದಿನವಾದ ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ನೆರೆದಿದ್ದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ.
ಮಸೀದಿಯೊಳಗೆ ಸಂಭವಿಸಿದ ಬಾಂಬ್ ಸ್ಫೋಟದ ಹೊಣೆಯನ್ನು ಈವರೆಗೂ ಯಾವುದೇ ಭಯೋತ್ಪಾದಕ ಸಂಘಟನೆ ಹೊತ್ತುಕೊಂಡಿಲ್ಲ. ಘಟನೆಗೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ ಎಂದು ಕಾಬೂಲ್ ಪೊಲೀಸರು ತಿಳಿಸಿದ್ದಾರೆ.