Advertisement
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯದಲ್ಲಿ ಕಳೆದೊಂದು ತಿಂಗಳಿಂದ ಮೈತ್ರಿ ಸರ್ಕಾರ ಮಾಧ್ಯಮವೂ ಸೇರಿದಂತೆ ರಾಜ್ಯದ ರಾಜಕೀಯ ಎದುರಾಳಿಗಳನ್ನು ಹತ್ತಿಕ್ಕಲು ಸೇಡಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದ ಪ್ರತಿಭಟನಾಕಾರರು ಮೈತ್ರಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
Related Articles
Advertisement
ಪ್ರಜಾತಂತ್ರ ವ್ಯವಸ್ಥೆಗೆ ಮಾರಕ: ಸ್ವತಃ ಮುಖ್ಯಮಂತ್ರಿಗಳೇ ಮಾಧ್ಯಮ ಪ್ರತಿನಿಧಿಗಳನ್ನು ದೂಷಿಸುವುದು, ಮಾಧ್ಯಮಗಳನ್ನು ಬಹಿಷ್ಕರಿಸುವುದಾಗಿ ಹೇಳಿಕೆ ನೀಡುವುದು, ಪ್ರಜಾತಂತ್ರದ ನಾಲ್ಕನೇ ಸ್ತಂಭವಾದ ಮಾಧ್ಯಮಗಳನ್ನು ನಿಯಂತ್ರಿಸುವ ಸರ್ವಾಧಿಕಾರಿ ಮನೋಭಾವದ ಪ್ರತೀಕವಾಗಿದೆ ಎಂದರು. ರಾಜ್ಯ ಸರ್ಕಾರದ ಧೋರಣೆಯೇ ಪ್ರಜಾತಂತ್ರ ವ್ಯವಸ್ಥೆಗೆ ಮಾರಕವಾಗಿದೆ ಎಂದು ಕಿಡಿಕಾರಿದರು.
ಉಗ್ರ ಹೋರಾಟ ಎಚ್ಚರಿಕೆ: ಸಾಮಾಜಿಕ ಜಾಲತಾಣಗಳಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕಾರಣಕ್ಕೆ ಬಿಜೆಪಿ ಹಿತೈಷಿಗಳನ್ನು ಮತ್ತು ಹಿರಿಯ ಪತ್ರಕರ್ತರನ್ನು ಕಾರಾಗೃಹಕ್ಕೆ ಕಳುಹಿಸಲು ಸ್ವತಃ ರಾಜ್ಯದ ಗೃಹ ಮಂತ್ರಿಗಳೇ ವಿಶೇಷ ಆಸಕ್ತಿ ವಹಿಸಿದ್ದಾರೆ. ಸರ್ಕಾರ ದ್ವೇಷದ ರಾಜಕಾರಣ ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆಗೆ ಗಮನ ಕೊಡಲಿ. ಸಮ್ಮಿಶ್ರ ಸರ್ಕಾರ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡುವುದನ್ನು ಕೈ ಬಿಡದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.
ತಾಲೂಕು ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿ, ಸಮ್ಮಿಶ್ರ ಸರ್ಕಾರ ವಿರೋಧಿಸುವವರ ಧ್ವನಿ ಅಡಗಿಸುವಂತಹ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣವು ತಮ್ಮ ಮೂಗಿನಡಿಯೇ ನಡೆಯುತ್ತಿದ್ದರೂ ಮುಖ್ಯಮಂತ್ರಿಗಳು ಮೌನ ವಹಿಸಿದ್ದಾರೆ. ರಾಜ್ಯಪಾಲರು ಸಮ್ಮಿಶ್ರ ಸರ್ಕಾರಕ್ಕೆ ಬುದ್ಧಿ ಕಲಿಸುವ ಕೆಲಸ ಮಾಡಬೇಕು. ರಾಜ್ಯದಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಭಯದ ವಾತಾವರಣ ನಿರ್ಮಾಣವಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದರು.
ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಎ.ವಿ.ಬೈರೇಗೌಡ, ಹನುಮಂತಪ್ಪ, ರಾಮಣ್ಣ, ಲಕ್ಷ್ಮೀನಾರಾಯಣ ಗುಪ್ತ, ಲಲಿತಾ ಭೂಷಣ್, ಲಕ್ಷ್ಮೀಪತಿ, ಬಾಲು, ಮಧುಚಂದ್ರ, ಜಯಶಂಕರ್ ಸೇರಿದಂತೆ ಬಿಜೆಪಿ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಿ: ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಜಿ.ವಿ.ಮಂಜುನಾಥ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಜಿಲ್ಲಾಡಳಿತ ಭವನಕ್ಕೆ ತೆರಳಿ ತಮ್ಮ ಹಕ್ಕೋತ್ತಾಯಗಳ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮುಖಾಂತರ ರಾಜ್ಯಪಾಲ ವಜುಭಾಯಿ ವಾಲಾರಿಗೆ ಮನವಿ ಸಲ್ಲಿಸಿದರು.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಬೇಕು, ರಾಜಕೀಯ ದ್ವೇಷವನ್ನು ಬದಿಗಿಟ್ಟು ಆಡಳಿತ ನಡೆಸುವಂತೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಸೂಚಿಸಬೇಕೆಂದು ಬಿಜೆಪಿ ಕಾರ್ಯಕರ್ತರು ತಮ್ಮ ಹಕ್ಕೋತ್ತಾಯದಲ್ಲಿ ಮನವಿ ಮಾಡಿದ್ದಾರೆ.