ಬೆಂಗಳೂರು: ನಾಡ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರನ್ನು 24 ಗಂಟೆಯೊಳಗೆ ಪಕ್ಷದಿಂದ ವಜಾ ಮಾಡಬೇಕು ಎಂದು ಕನ್ನಡ ಪರ ಸಂಘಟನೆಗಳು ಒತ್ತಾಯಿಸಿವೆ.
ನಗರದಲ್ಲಿ ಗುರುವಾರ ಕನ್ನಡ ಒಕ್ಕೂಟ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆದು, ಲಕ್ಷ್ಮೀ ಹೆಬ್ಟಾಳ್ಕರ್ ವಜಾಕ್ಕೆ ಆಗ್ರಹಿಸಲಾಯಿತು. ಕಾಂಗ್ರೆಸ್‌ಗೆ ನಾಡಿನ ಕುರಿತು ಬದ್ಧತೆ ಇದ್ದರೆ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ವಜಾ ಮಾಡಬೇಕು.
ಹೆಬ್ಟಾಳ್ಕರ್ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಈಗಾಗಲೇ ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಮನವಿ ಮಾಡಿದ್ದೇವೆ. ಸೆ.2ರಂದು ಬೆಳಗಾವಿಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತೇವೆ. ಆದ್ದರಿಂದ 24 ಗಂಟೆಯೊಳಗೆ ಕ್ರಮ ಕೈಗೊಳ್ಳಬೇಕು ಎಂದು ಗಡುವು ನೀಡಿದರು.
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ಮಾತನಾಡಿ, ಕಾಂಗ್ರೆಸ್ ಮುಖಂಡರಾದ ಲಕ್ಷ್ಮೀ ಹೆಬ್ಟಾಳ್ಕರ್ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಅವರನ್ನು ಗಡಿಪಾರು ಮಾಡಬೇಕು. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸಮರ್ಥನೆ ಮಾಡಿಕೊಳ್ಳಲು ಯತ್ನಿಸುತ್ತಿರುವುದು ಸರಿಯಲ್ಲ. ಕ್ಷಮೆ ಕೇಳಿದರೆ ಒಪ್ಪುವುದಿಲ್ಲ ಎಂದರು.
ಕ್ರಮದ ಭರವಸೆ: ಬಳಿಕ, ಕನ್ನಡ ಒಕ್ಕೂಟದ ಕಾರ್ಯಕರ್ತರು ಕೆಪಿಸಿಸಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ವೇಳೆ, ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, “ಲಕ್ಷ್ಮೀ ಹೆಬ್ಟಾಳ್ಕರ್ ಏನು ಹೇಳಿದ್ದಾರೆ ಗೊತ್ತಿಲ್ಲ. ವಿಷಯ ಏನೆಂದು ತಿಳಿದುಕೊಂಡ ನಂತರ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮಾತನಾಡಿ, “ಲಕ್ಷ್ಮೀ ಹೆಬ್ಟಾಳ್ಕರ್ ಸ್ಪಷ್ಟನೆ ನೀಡಿದ್ದು, ನಾನು ಆ ರೀತಿಯಲ್ಲಿ ಹೇಳಿಲ್ಲ. ಮಾತಿನ ಒಂದು ಭಾಗವನ್ನು ಮಾತ್ರ ಮಾಧ್ಯಮಗಳು ತೋರಿಸಿವೆ ಎಂದಿದ್ದಾರೆ. ಈಗಾಗಲೇ ನಾಡಿನ ಜನರಲ್ಲಿ ಕ್ಷಮೆ ಕೋರಿದ್ದಾರೆ’ ಎಂದರು.