ಹೈದರಾಬಾದ್: ಬಹು ನಿರೀಕ್ಷಿತ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಹೈದರಾಬಾದ್‌ನಲ್ಲಿ ಜು.2 ಮತ್ತು ಜು.3ರಂದು ನಡೆಯಲಿದೆ. ಮುಂದಿನ ವರ್ಷ ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಮಹತ್ವದ್ದಾಗಿದೆ.
2014ರಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಐದು ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ನವದೆಹಲಿಯಿಂದ ಹೊರತಾಗಿರುವ ನಗರದಲ್ಲಿ ಕಾರ್ಯಕಾರಿಣಿ ಆಯೋಜಿಸಲಾಗುತ್ತಿದೆ. ಶನಿವಾರ ಮಧ್ಯಾಹ್ನದ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಕಾರ್ಯಕಾರಿಣಿ ಉದ್ಘಾಟಿಸಲಿದ್ದಾರೆ.
ಭಾನುವಾರ ಅದು ಪ್ರಧಾನಿ ನರೇಂದ್ರ ಮೋದಿಯವರ ಭಾಷಣದ ಮೂಲಕ ಮುಕ್ತಾಯವಾಗಲಿದೆ.
ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿವಸೇನೆಯ ಏಕನಾಥ ಶಿಂಧೆ ಬಣದ ಸರ್ಕಾರ ಅಸ್ತಿತ್ವಕ್ಕೆ ಬಂದಿರುವುದೂ ಕಾರ್ಯಕಾರಣಿಗೆ ಮಹತ್ವ ತಂದಿದೆ. ಬಿಜೆಪಿ ರಾಜ್ಯದ ಸಿಎಂಗಳು, ಪಕ್ಷದ ನಾಯಕರು ಭಾಗವಹಿಸಲಿದ್ದಾರೆ.
ದಕ್ಷಿಣ ಭಾರತದಲ್ಲಿ ಪಕ್ಷದ ವಿಸ್ತರಣೆ ವಿಶೇಷವಾಗಿ ತೆಲಂಗಾಣದಲ್ಲಿ ಹಾಗೂ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಗಳು ಇರುವುದರಿಂದ 2 ದಿನಗಳ ಸಭೆ ಮಹತ್ವದ್ದಾಗಿದೆ. ಜು.3ರಂದು ಕಾರ್ಯಕಾರಿಣಿ ಮುಕ್ತಾಯವಾದ ಬಳಿಕ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬೃಹತ್ ಸಾರ್ವಜನಿಕ ಸಭೆ ನಡೆಯಲಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತೆಲಂಗಾಣದಲ್ಲಿ 4 ಕ್ಷೇತ್ರಗಳಲ್ಲಿ ಗೆದ್ದಿದೆ. 2020ರಲ್ಲಿ ನಡೆದಿದ್ದ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ 48 ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.