ಬೆಂಗಳೂರು: ಬರುವ ವರ್ಷದಿಂದ ಪ್ರಾಥಮಿಕ ಹಂತದಿಂದಲೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾಗಲಿದ್ದು, ಅದಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳಿಗೆ ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಷ್ಮೀ ನಗರದ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಕಚೇರಿಯನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಹಲವು ಕಡೆಗಳಲ್ಲಿ 50 ಕೋಟಿ ರೂಪಾಯಿ ವೆಚ್ಚದಲ್ಲಿ ದೆಹಲಿ ಮಾದರಿಯ ಪಬ್ಲಿಕ್ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.
ಈ ಶಾಲೆಗಳಲ್ಲಿ ಆಧುನಿಕತೆಗೆ ತಕ್ಕಂತೆ ಗ್ರಂಥಾಲಯ, ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್ ಗಳನ್ನು ನಿರ್ಮಾಣ ಮಾಡಲಾಗಿದ್ದು, ಯಾವುದೇ ಖಾಸಗಿ ಶಾಲೆಗಳಗೂ ಕಡಿಮೆ ಇಲ್ಲದ ರೀತಿಯಲ್ಲಿ ನಿರ್ಮಾಣ ಮಾಡಲಾಗಿದೆ. ತರಗತಿಗಳ ಪ್ರವೇಶಕ್ಕೆ ಸಾಕಷ್ಟು ಬೇಡಿಕೆ ಇದ್ದು, ಅದನ್ನು ನಿಭಾಯಿಸುವುದೇ ದೊಡ್ಡ ಸವಾಲಿನ ಕೆಲಸವಾಗಿದೆ ಎಂದರು.
ಇದನ್ನೂ ಓದಿ:ಹೊಸ ತಿರುವು ಪಡೆದ ಫಾಝಿಲ್ ಕೊಲೆ ಪ್ರಕರಣ: ಕಾರು ನೀಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಜಿತ್
ಬರುವ ವರ್ಷದಿಂದ ಕುರುಬರಹಳ್ಳಿ ಸೇರಿದಂತೆ ಎಲ್ಲ ಶಾಲೆಯಲ್ಲಿ ಹೆಚ್ಚುವರಿ ಕೊಠಡಿ, ಸಿಬ್ನಂದಿ ಹೀಗೆ ಎಲ್ಲ ರೀತಿಯ ಅಗತ್ಯ ಸೌಲಭ್ಯಗಳನ್ನು ಮತ್ತಷ್ಟು ಹೆಚ್ಚಿಸಿ ದಾಖಲಾತಿಯನ್ನು ಕೂಡ ಹೆಚ್ಚಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಬೆಂಗಳೂರು ಉತ್ತರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಜಯರಾಮಯ್ಯ, ಜಯಸಿಂಹ, ಶ್ರೀನಿವಾಸ್, ಸಂಘದ ಅಧ್ಯಕ್ಷ ಗೋಪಾಲಕೃಷ್ಣ, ಮಂಜು, ಮುನಿರಾಜು, ಕುಮಾರ್ ಮತ್ತು ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.