Advertisement

ಕಾರ್ಮಿಕರಿಗೆ ಸೌಲಭ್ಯ: ಅಧಿಕಾರಿಗಳು ಶ್ರಮಿಸಲಿ

03:07 PM May 10, 2022 | Team Udayavani |

ಗದಗ: ಜಿಲ್ಲೆಯಲ್ಲಿನ ಕಾರ್ಮಿಕರಿಗೆ ಸರ್ಕಾರದ ಸೌಲಭ್ಯಗಳು ದೊರಕಬೇಕು. ಅರ್ಹ ಕಾರ್ಮಿಕರಿಗೆ ಸೌಲಭ್ಯ ಒದಗಿಸುವಲ್ಲಿ ಇಲಾಖೆ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ತಿಳಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿನ ಕಾರ್ಮಿಕ ಇಲಾಖೆಯಿಂದ ಸೋಮವಾರ ಏರ್ಪಡಿಸಿದ್ದ ಕಾರ್ಮಿಕರ ಕುಂದುಕೊರತೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಮಿಕರ ಸಮಸ್ಯೆಗಳನ್ನು ಪರಿಹರಿಸಲು ಕುಂದುಕೊರತೆ ಸಭೆ ನಡೆಸಲಾಗುತ್ತಿದೆ. ಕಾರ್ಮಿಕರ ಕುಂದುಕೊರತೆ ಪರಿಹಾರಕ್ಕಾಗಿ ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲೂ ನಿರಂತರವಾಗಿ ಸಭೆ ನಡೆಸುವಂತೆ ಸೂಚಿಸಿದರು.

ಕಾರ್ಮಿಕರ ಕಾರ್ಡ್‌ ಮಾಡಿಸುವ ಸಂದರ್ಭದಲ್ಲಿ ನಿಗದಿತ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡದಂತೆ ಇಲಾಖೆ ಅಧಿಕಾರಿಗಳು ನಿಗಾ ವಹಿಸಬೇಕು. ಅನರ್ಹರಿಗೆ ಕಾರ್ಡ್‌ ವಿತರಿಸದಂತೆ ಇಲಾಖಾಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು ಎಂದು ಆದೇಶಿಸಿದರು.

ಸ್ಥಳೀಯ ಸಂಸ್ಥೆಗಳ ಸಮನ್ವಯದೊಂದಿಗೆ ಪ್ರತಿ ತಾಲೂಕಿನಲ್ಲಿಯೂ ಕಾರ್ಮಿಕರ ಸಮುದಾಯ ಭವನ ನಿರ್ಮಾಣಕ್ಕೆ ಸೂಕ್ತ ನಿವೇಶನ ಗುರುತಿಸಿ, ಕಟ್ಟಡ ನಿರ್ಮಾಣಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಸಬೇಕು. ಜಿಲ್ಲೆಯಲ್ಲಿ ಕಾರ್ಮಿಕರ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ಆಸ್ಪತ್ರೆಗಳ ಮಾಹಿತಿಯನ್ನು ಇಲಾಖಾಧಿ ಕಾರಿಗಳು ಕಾರ್ಮಿಕರಿಗೆ ತಿಳಿಸಿ ಜಾಗೃತಿ ಮೂಡಿಸಬೇಕು. ಕಾರ್ಮಿಕರನ್ನು ಗುರುತಿಸಲಾದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವಂತೆ ತಿಳಿ ಹೇಳಬೇಕು. ಕಾರ್ಮಿಕರ ಬೇಡಿಕೆಗೆ ಅನುಗುಣವಾಗಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಾರ್ಮಿಕರಿಗೆ ಚಿಕಿತ್ಸೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಕಾರ್ಮಿಕ ಇಲಾಖೆ ಅಧಿಕಾರಿ ಸುಧಾ ಗರಗ ಪ್ರಾಸ್ತಾವಿಕ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ಈಗಾಗಲೇ ಆನ್‌ಲೈನ್‌ ಮೂಲಕ ಅನೇಕ ಸೌಲಭ್ಯಗಳ ಕುರಿತು ಅರ್ಜಿ ಸ್ವೀಕರಿಸಿ ವಿಲೇವಾರಿ ಮಾಡಲಾಗುತ್ತಿದೆ. ಕಾರ್ಮಿಕರ ಅದಾಲತ್‌ಗೆ ಸಂಬಂಧಿಸಿದಂತೆ ಆಗಸ್ಟ್‌ 2021ರಿಂದ ಏ.2022 ರವರೆಗೆ ಒಟ್ಟು 2236 ಅರ್ಜಿಗಳನ್ನು ಸ್ವೀಕರಿಸಿ, ವಿಲೇವಾರಿ ಮಾಡಲಾಗಿದೆ. 4.89 ಕೋಟಿ ರೂ. ಗಳನ್ನು ಕಾರ್ಮಿಕರ ಖಾತೆಗೆ ಜಮಾ ಮಾಡಲಾಗಿದೆ. ಅರ್ಹ ಕಾರ್ಮಿಕರಿಗೆ ಇಲಾಖೆಯ ಸೌಲಭ್ಯ ದೊರಕಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.

Advertisement

ಇದೇ ವೇಳೆ ಕಾರ್ಮಿಕರ ನಿರೀಕ್ಷಕರ ನೇಮಕ, ಕಾರ್ಮಿಕರಿಗೆ ಬಸ್‌ಪಾಸ್‌ ಸೌಲಭ್ಯ, ಕಟ್ಟಡ ಕಾರ್ಮಿಕರ ನೋಂದಣಿ ಹಾಗೂ ನವೀಕರಣ, ಗೃಹಭಾಗ್ಯ ಯೋಜನೆ, ಕಾರ್ಮಿಕ ಮಕ್ಕಳಿಗೆ ಮದುವೆಗೆ ಸಹಾಯಧನ, ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಒದಗಿಸುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ವಿವಿಧ ಕಾರ್ಮಿಕ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಸಂದೇಶ ಪಾಟೀಲ, ಕಾರ್ಮಿಕ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next