ಬೆಂಗಳೂರು: ”ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇದ್ರ ಫಡ್ನವಿಸ್ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಅವರ ಕನಸು ಎಂದೂ ನನಸಾಗುವುದಿಲ್ಲ. ನಾಡಿನ ನೆಲ, ಜಲ, ಗಡಿ ರಕ್ಷಣೆ ವಿಚಾರದಲ್ಲಿ ನಮ್ಮ ಸರ್ಕಾರ ಕಟಿ ಬದ್ಧವಾಗಿದೆ” ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ.
”ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಒಂದಿಂಚೂ ಜಾಗವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ಮಹಾರಾಷ್ಟ್ರದಲ್ಲಿರುವ ಕನ್ನಡ ಭಾಷಿಕ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ ಕರ್ನಾಟಕಕ್ಕೆ ಸೇರಬೇಕೆನ್ನುವುದು ನಮ್ಮ ಆಗ್ರಹವಿದೆ. ಮಹಾರಾಷ್ಟ್ರ ಸರ್ಕಾರ 2004 ರಿಂದಲೂ ಎರಡೂ ರಾಜ್ಯಗಳ ಗಡಿ ವಿಚಾರದಲ್ಲಿ ಕ್ಯಾತೆ ತೆಗೆದು ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದೆ. ಇದುವರೆಗೂ ಯಶಸ್ವಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ನಾವು ನಮ್ಮ ಕಾನೂನು ಹೋರಾಟವನ್ನು ಪ್ರಬಲವಾಗಿ ಮಾಡಲು ಸನ್ನದ್ದರಾಗಿದ್ದೇವೆ” ಎಂದು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಗಳ ಮೂಲಕ ತಿರುಗೇಟು ನೀಡಿದ್ದಾರೆ.
”ಕರ್ನಾಟಕದ ಮರಾಠಿ ಭಾಷಿಕ ಭಾಗಗಳನ್ನು ತಮ್ಮ ರಾಜ್ಯಕ್ಕೆ ಸೇರಿಸಲಾಗುವುದು. ಮಹಾರಾಷ್ಟ್ರದ ಒಂದೇ ಒಂದು ಹಳ್ಳಿಯೂ ಕರ್ನಾಟಕಕ್ಕೆ ಹೋಗುವುದಿಲ್ಲ. ಬದಲಾಗಿ ಬೆಳಗಾವಿ-ಕಾರವಾರ-ನಿಪ್ಪಾಣಿ ಸೇರಿದಂತೆ ಮರಾಠಿ ಭಾಷಿಕ ಗ್ರಾಮಗಳನ್ನೂ ನಮ್ಮ ರಾಜ್ಯಕ್ಕೆ ತರಲು ರಾಜ್ಯ ಸರ್ಕಾರ ಹೋರಾಟ ನಡೆಸಲಿದೆ” ಎಂದು ಫಡ್ನವೀಸ್ ಹೇಳಿಕೆ ನೀಡಿದ್ದರು.