ದಾವಣಗೆರೆ: ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2010ನೇ ಸಾಲಿನಿಂದ ಅಧಿಕಾರಿಗಳು ನಡೆಸಿರುವ ಭ್ರಷ್ಟಾಚಾರ ಮುಚ್ಚಿಹಾಕುವ ಉದ್ದೇಶದಿಂದ ಸರ್ಕಾರಕ್ಕೇ ಸುಳ್ಳು ಮಾಹಿತಿ ನೀಡಿರುವ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಕಾಧಿಕಾರಿ ಎಸ್. ಅಶ್ವತಿ, ಉಪ ಕಾರ್ಯದರ್ಶಿ ಜಿ.ಎಸ್. ಷಡಕ್ಷರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮುಖಂಡರು ಗುರುವಾರ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ದೂರು ಸಲ್ಲಿಸಿದ್ದಾರೆ.
ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 2010ನೇ ಸಾಲಿನಿಂದ ಭ್ರಷ್ಟಾಚಾರ ನಡೆಸಿರುವ 6 ತಾಪಂ ಕಾರ್ಯ ನಿರ್ವಹಕಾಧಿಕಾರಿಗಳು, ಪಂಚಾಯತ್ ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ) ಮತ್ತು ಸಂಬಂಧಿತ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಒಂದಕ್ಕೆ ಮೂರರಷ್ಟು ಯೋಜನಾ ವರದಿ ತಯಾರಿಸಿ, ಬೋಗಸ್ ಬಿಲ್ ಬರೆದುಕೊಂಡಿರುವುದರ ಬಗ್ಗೆ ಮುಕ್ತ ತನಿಖೆ ನಡೆಸಬೇಕು ಎಂದು ರೈತ ಸಂಘ ಮತ್ತು ಹಸಿರು ಸೇನೆಯಿಂದ 2014ರ ಆ.11 ರಂದು ಪಂಚಾಯತ್‌ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ದೂರು ಸಲ್ಲಿಸಲಾಗಿತ್ತು ಎಂದು ಎಸಿಬಿಗೆ ಸಲ್ಲಿಸಿರುವ ದೂರಿನಲ್ಲಿ ಪ್ರಸ್ತಾಪಿಸಿದ್ದಾರೆ.
ರೈತ ಸಂಘ ಮತ್ತು ಹಸಿರು ಸೇನೆ ನೀಡಿದ್ದಂತಹ ದೂರಿನ ಅನ್ವಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಆಯುಕ್ತರ ನಿರ್ದೇಶನದಂತೆ ಜಿಪಂ ಮುಖ್ಯ ಕಾರ್ಯ ನಿರ್ವಹಕಾಧಿಕಾರಿಗೆ ಅನೇಕ ಉಲ್ಲೇಖ ಮತ್ತು ಸುತ್ತೋಲೆ ನೀಡಿದ್ದರೂ ಯಾವುದೇ ತನಿಖೆ ನಡೆಸಿಲ್ಲ. 6 ತಾಪಂ ಕಾರ್ಯ ನಿರ್ವಹಕಾಧಿಕಾರಿಗಳು, ಪಂಚಾಯತ್‌ರಾಜ್ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಮತ್ತು ಸಂಬಂಧಿತ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಎಸಗಿರುವ ಭ್ರಷ್ಟಾಚಾರ ಮುಚ್ಚಿ ಹಾಕುವ ಉದ್ದೇಶದಿಂದ 2018ರ ಅ. 4 ರಂದು ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಪ್ರಕರಣಗಳನ್ನ ಮುಚ್ಚಿ ಹಾಕಿರುವ ಜಿಪಂ ಮುಖ್ಯ ಕಾರ್ಯನಿರ್ವಹಕಾಧಿಕಾರಿ ಮತ್ತು ಉಪ ಕಾರ್ಯದರ್ಶಿ ವಿರುದ್ಧ ಕೂಡಲೇ ತನಿಖೆ ನಡೆಸಿ, ದುರ್ಬಳಕೆ ಆಗಿರುವ ಸಾರ್ವಜನಿಕರ ಹಣವನ್ನು ಬಡ್ಡಿ ಸಮೇತ ವಸೂಲಿ ಮಾಡಬೇಕು ಮತ್ತು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ ಇತರರು ದೂರು ಸಲ್ಲಿಸಿದ ಸಂದರ್ಭದಲ್ಲಿದ್ದರು.