ತುಮಕೂರು: ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಆಗಮಿಸುತ್ತಿದ್ದು, ನಾಗರಿಕರಲ್ಲಿ ಹೆಚ್ಚಿನ ನಿರೀಕ್ಷೆ ಮೂಡಿಸಿದೆ. ಬಯಲುಸೀಮೆ ಪ್ರದೇಶವಾದರೂ ರಾಗಿ ಮತ್ತು ತೆಂಗು ಬೆಳೆಯಲ್ಲಿ ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿರುವ ಕಲ್ಪತರು ನಾಡಿನಲ್ಲಿ ಪ್ರಗತಿಪರ ರೈತರಿಗೆ ರಾಷ್ಟ್ರಮಟ್ಟದ ಕೃಷಿ ಸಮ್ಮಾನ್ ಯೋಜನೆ ಅನುಷ್ಠಾನ ಹಾಗೂ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸುವುದರ ಜೊತೆಗೆ ಸಿದ್ಧಗಂಗಾ ಮಠದಲ್ಲಿ ಮಕ್ಕಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಬುಧವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವಸತಿ ಸಚಿವ ವಿ.ಸೋಮಣ್ಣ, ಸಂಸದ ಜಿ.ಎಸ್.ಬಸವರಾಜ್, ಶಾಸಕ ಜಿ.ಬಿ.ಜ್ಯೋತಿಗಣೇಶ್ ಸೇರಿ ವಿವಿಧ ಅಧಿಕಾರಿಗಳು ಕಾರ್ಯಕ್ರಮ ನಡೆಯುವ ಸಿದ್ಧಗಂಗಾ ಮಠ ಹಾಗೂ ಸರ್ಕಾರಿ ಜೂನಿಯರ್ ಕಾಲೇಜು ಮೈದಾನಕ್ಕೆ ಭೇಟಿ ನೀಡಿ, ಸಿದ್ಧತೆಯ ಪರಿಶೀಲನೆ ನಡೆಸಿದರು.
ರೈತ ಸಮಾವೇಶದಲ್ಲಿ 1.5 ಲಕ್ಷಕ್ಕೂ ಹೆಚ್ಚು ರೈತರು ಭಾಗವಹಿಸುವ ಸಾಧ್ಯತೆ ಇದೆ. ವಿವಿಧ ಭಾಗಗಳಿಂದ 1,500ಕ್ಕೂ ಹೆಚ್ಚು ಬಸ್‌ಗಳಲ್ಲಿ ರೈತರು ಆಗಮಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಸಿದ್ಧಗಂಗಾ ಮಠಕ್ಕೆ ಮೋದಿ ಭೇಟಿ ನೀಡುತ್ತಿದ್ದು, ಸಿದ್ಧಗಂಗಾ ಕ್ಷೇತ್ರದ ಲಿಂ.ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆಗೆ ಪೂಜೆ ಸಲ್ಲಿಸುವರು. ನಂತರ, ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದು, ಮಕ್ಕಳೊಂದಿಗೆ ಸಂವಾದ ನಡೆಸುವರು. ನಂತರ, ಮಠದ ಆವರಣದಲ್ಲಿ ಬಿಲ್ವಪತ್ರೆ ಸಸಿ ನೆಡಲಿದ್ದಾರೆ. ಬಳಿಕ, ಡಾ.ಶ್ರೀ ಶಿವಕುಮಾರ್ ಸ್ವಾಮೀಜಿ ವಸ್ತು ಸಂಗ್ರಹಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸುವರು.
32 ರೈತರಿಗೆ ಪ್ರಶಸ್ತಿ ಪ್ರದಾನ: ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 16 ರೈತ ಮಹಿಳೆಯರು ಹಾಗೂ 16 ಪುರುಷ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ನಡೆಯಲಿದೆ. ಪ್ರಶಸ್ತಿ ಆಯ್ಕೆಯಲ್ಲಿ ಕರ್ನಾಟಕ 3ನೇ ಸ್ಥಾನ ಪಡೆದಿದೆ. ರಾಜ್ಯದ ಪರ ಪ್ರಶಸ್ತಿಯನ್ನು ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸ್ವೀಕರಿಸುವರು. ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ಯೋಜನೆಯ ಕೊನೆಯ ಕಂತು 12 ಸಾವಿರ ಕೋಟಿ ರೂ.ಗಳನ್ನು ರೈತರ ಖಾತೆಗೆ ಜಮಾ ಮಾಡಲಿದ್ದು, ಇದೇ ವೇಳೆ ರೈತರಿಗೆ ಹಲವು ಯೋಜನೆ ಘೋಷಿಸುವ ನಿರೀಕ್ಷೆ ಇದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.
ರಾಜ್ಯಕ್ಕೆ 3ನೇ ಸ್ಥಾನ – ಪ್ರಹ್ಲಾದ್ ಜೋಶಿ: ಕೃಷಿ ಸಮ್ಮಾನ್ ಕಾರ್ಯಕ್ರಮದಲ್ಲಿ 32 ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರಕ್ಕೆ ಪ್ರಧಾನಿ ಆಗಮಿಸುವ ಹಿನ್ನೆಲೆಯಲ್ಲಿ ನಗರದ ಜೂನಿಯರ್ ಕಾಲೇಜು ಮೈದಾನದ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಕೇಂದ್ರ ಕೃಷಿ ಇಲಾಖೆಯಿಂದ ಕಾರ್ಯಕ್ರಮ ಆಯೋಜಿಸಲಾಗಿದ್ದು, ವಿವಿಧ ರಾಜ್ಯಗಳ ರೈತರಿಗೆ ಕೃಷಿ ಕರ್ಮಣ್ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿ ಆಯ್ಕೆಯಲ್ಲಿ ಕರ್ನಾಟಕ 3ನೇ ಸ್ಥಾನ ಪಡೆದಿದೆ. ರಾಜ್ಯದ ಪರ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. 3 ರಾಜ್ಯದ ಮುಖ್ಯಮಂತ್ರಿಗಳು ಹಾಗೂ 12 ರಾಜ್ಯದ ಕೃಷಿ ಮಂತ್ರಿಗಳು ಭಾಗವಹಿಸುವ ನಿರೀಕ್ಷೆ ಇದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
6 ಕೋಟಿ ರೈತ ಕುಟುಂಬಕ್ಕೆ ಲಾಭ: ತೋಮರ್
ತುಮಕೂರು: ಪ್ರಧಾನಿ ಮೋದಿಯವರು ಕೃಷಿ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ 12 ಸಾವಿರ ಕೋಟಿ ರೂ.ವರ್ಗಾವಣೆಗೆ ಚಾಲನೆ ನೀಡಲಿದ್ದಾರೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ತಿಳಿಸಿದರು. ಕಾರ್ಯಕ್ರಮ ನಡೆಯಲಿರುವ ನಗರದ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಬುಧವಾರ ಸಂಜೆ ಸಿದ್ಧತೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಕೃಷಿ ಸಮ್ಮಾನ್ ಯೋಜನೆಯ ಲಾಭವನ್ನು ದೇಶದ 6 ಕೋಟಿ ರೈತ ಕುಟುಂಬ ಪಡೆಯಲಿದೆ. ಮೊದಲಿಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಗಿತ್ತು. ಆದರೆ, ಸಿದ್ಧಗಂಗಾ ಮಠದ ಲಿಂಗೈಕ್ಯ ಶ್ರೀಗಳ ಗದ್ದುಗೆ ದರ್ಶನದೊಂದಿಗೆ ತುಮಕೂರಿನಲ್ಲಿ ಕಾರ್ಯಕ್ರಮ ಆಯೋಜಿಸಲು ಮೋದಿ ನಿರ್ಧರಿಸಿದ್ದರಿಂದ ಇಲ್ಲಿ ಕೃಷಿ ಸಮ್ಮಾನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.