ಜೇವರ್ಗಿ: ಸಾಲಬಾಧೆಯಿಂದ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹರನೂರ ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ ಗೋಪಾಲ ದಾಸರ (28) ಆತ್ಮಹತ್ಯೆ ಮಾಡಿಕೊಂಡ ರೈತ.
ಈತನಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಇದ್ದಾರೆ. ಈತ ತನ್ನ ಸ್ವಂತ ನಾಲ್ಕು ಎಕರೆ ಜಮೀನಿನಲ್ಲಿ ಕೃಷಿ ಕಾಯಕ ಮಾಡಿಕೊಂಡಿದ್ದ. ಕಳೆದ ಎರಡ್ಮೂರು ವರ್ಷಗಳಿಂದ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಬೆಳೆ ಹಾನಿಯಾಗಿ ಸಾಕಷ್ಟು ನಷ್ಟ ಅನುಭವಿಸಿ ಸಾಲ ಮಾಡಿದ್ದರು.
ಜೇವರ್ಗಿ ಕೆಜಿಬಿ ಬ್ಯಾಂಕಿನಲ್ಲಿ 2 ಲಕ್ಷ ರೂ. ಸಾಲ, ಖಾಸಗಿಯಾಗಿ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದ ಎಂದು ಪೊಲೀಸ್ ಠಾಣೆಯಲ್ಲಿ ಮೃತ ರೈತನ ಪತ್ನಿ ತುಳಜಮ್ಮ ದಾಸರ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಳೆದ ಮಾ. 12ರಂದು ಶ್ರೀನಿವಾಸ ಹರನೂರ ಗ್ರಾಮದ ಸ್ವಂತ ಹೊಲದಲ್ಲಿ ವಿಷ ಸೇವಿಸಿದ್ದ. ಹೆಚ್ಚಿನ ಚಿಕಿತ್ಸೆಗೆ ಕಲಬುರಗಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಾ.17ರಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪರಿಹಾರಕ್ಕೆ ಆಗ್ರಹ
ಸರ್ಕಾರ ರೈತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು. ಈತನ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಸುಭಾಷ ಹೊಸಮನಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.