ಸುರಪುರ: ಭೂ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘ ಹಸಿರು ಸೇನೆ ನೇತೃತ್ವದಲ್ಲಿ ಸಂತ್ರಸ್ತ ರೈತರು ನಾಗರಾಳ ಗ್ರಾಮದ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು.
ಲೋಕೋಪಯೋಗಿ ಹಾಗೂ ತಾಲೂಕು ಮತ್ತು ಜಿಲ್ಲಾಡಳಿತ ವಿರುದ್ಧ ಪ್ರತಿಭಟನಾಕಾರರು ಘೋಷಣೆ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.
ಈ ವೇಳೆ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶರಣಪ್ಪ ಕೋಳಿಹಾಳ ಮಾತನಾಡಿ, ದೇವಾಪುರದಿಂದ ಮನಗೂಳಿ ಹೆದ್ದಾರಿ ನಿರ್ಮಾಣದಲ್ಲಿ ನಾಗರಾಳ ಹಂದ್ರಾಳ ಗ್ರಾಮಗಳ ಸುಮಾರು 86 ಜನ ರೈತರು ತಲಾ 284 ಅಡಿ ಭೂಮಿ ಕಳೆದುಕೊಂಡಿದ್ದಾರೆ. ಭೂಮಿ ಕಳೆದು ಕೊಂಡ ರೈತರಿಗೆ ಸರಕಾರ ಭೂ ಪರಿಹಾರ ನೀಡದೆ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದರು.
ಭೂ ಪರಿಹಾರಕ್ಕೆ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈ ಕುರಿತು ಮುಖ್ಯಮಂತ್ರಿ, ಲೊಕೋಪಯೋಗಿ ಸಚಿವರಿಗೆ ಪತ್ರ ಬರೆಯಲಾಗಿದೆ. ಆದರೆ ಯಾರೊಬ್ಬರು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ಅನಿವಾರ್ಯವಾಗಿ ರೈತರು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆ ರೈತರಿಗೆ ಮಾಹಿತಿ ನೀಡದೆ ರಸ್ತೆ ಕಾಮಗಾರಿ ಆರಂಭಿಸುವ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘಿಸಿದ್ದಾರೆ ಎಂದು ದೂರಿದರು.
ಸಂತ್ರಸ್ತ ರೈತ ಸುರೇಶ ನಾಗರಳಾ ಮಾತನಾಡಿ, ಕೃಷಿ ಭೂಮಿ ಕಳೆದುಕೊಂಡು ಬೀದಿಗೆ ಬಿದಿದ್ದೇವೆ. ಆದರೆ ಇನ್ನೂ ಪರಿಹಾರ ನೀಡಿಲ್ಲ. ಪರಿಹಾರ ನೀಡುವತನಕ ಕಾಮಗಾರಿ ಮಾಡಲು ಬಿಡುವುದಿಲ್ಲ. ಇದಕ್ಕೂ ಮೀರಿ ಕಾಮಗಾರಿಗೆ ಮುಂದಾದಲ್ಲಿ ಕಟುಂಬ ಸಮೇತವಾಗಿ ರಸ್ತೆ ಮೇಲೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳಲು ನಾವೆಲ್ಲರೂ ನಿರ್ಧರಿಸಿದ್ದೇವೆ ಎಂದರು.
ಜಿಲ್ಲಾ ಮತ್ತು ತಾಲೂಕು ಆಡಳಿತ ಹಾಗೂ ಜನಪ್ರತಿನಿಧಿಗಳಿಗೂ ಕೈ ಮುಗಿದು ಕೇಳಿಕೊಳ್ಳುತ್ತೇವೆ. ನಮ್ಮ ತಾಳ್ಮೆಯನ್ನು ಪರೀಕ್ಷಿಸಬೇಡಿ ಎಂದು ಎಚ್ಚರಿಸಿದರು. ನ್ಯಾಯಾಲಯ ಆದೇಶ ಉಲ್ಲಂಘಿಸಿದ ಗುತ್ತಿಗೆದಾರರ ಮೇಲೆ ಕ್ರಮ ಜರುಗಿಸಬೇಕು ಹಾಗೂ ಕಾಮಗಾರಿ ಸ್ಥಗಿತಗೊಳಿಸಲು ಗುತ್ತಿಗೆದಾರರಿಗೆ ಸೂಚಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಬರೆದ ಮನವಿಯನ್ನು ಲೋಕೋಪಯೋಗಿ ಇಲಾಖೆ ಇಇಗೆ ಸಲ್ಲಿಸಿದರು.