ಶ್ರೀರಂಗಪಟ್ಟಣ: ಸರ್ಕಾರ ತಮಿಳುನಾಡಿಗೆ ನೀರು ಹರಿಸುವ ಮೂಲಕ ರೈತರ ಬದುಕಿನ ಮೇಲೆ ಚಪ್ಪಡಿ ಎಳೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು ತಲೆ ಮೇಲೆ ಚಪ್ಪಡಿ ಕಲ್ಲು ಹೊತ್ತು ಪ್ರತಿಭಟನೆ ನಡೆಸಿದ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್. ನಂಜುಂಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ನೂರಾರು ರೈತರು ಚಪ್ಪಡಿ ಕಲ್ಲು ಹೊತ್ತು ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣವೇ ನಿಲ್ಲಿಸುವಂತೆ ಆಗ್ರಹಿಸಿದರು.
ಪಟ್ಟಣದ ಕುವೆಂಪು ವೃತ್ತದಿಂದ ಮುಖ್ಯರಸ್ತೆ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದ ರೈತ ಮುಖಂಡರು ಬಳಿಕ ತಾಲ್ಲೂಕು ಕಚೇರಿ ಎದುರು ರಾಜ್ಯ ಸರ್ಕಾರ ಹಾಗೂ ನಿರ್ವಹಣಾ ಸಮಿತಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರೈತರು ಇದುವರೆಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರ ಈಗಲಾದರೂ ಎಚ್ಚೆತ್ತುಕೊಂಡು ನೀರು ನಿಲ್ಲಿಸದೆ ಹೋದರೆ, ಕಾನೂನು ಭಂಗ ಚಳುವಳಿಗೆ ಇಳಿಯಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.