ಮೈಸೂರು: ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರುದ್ಧ ಹೋರಾಟ ಆರಂಭಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಹೋರಾಟದ ಮುಂದುವರಿದ ಭಾಗವಾಗಿ ಆ.14ರಂದು ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲು ತೀರ್ಮಾನಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟದಿಂದ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಭೂ ಸುಧಾರಣಾ ಕಾಯ್ದೆ ವಿರೋಧಿಸಿ ಈಗಾಗಲೇ ಆ.8ರಂದು ಭೂಮಿ ಮಾರಾಟಕ್ಕಿಲ್ಲ ಎಂದು ಶಪಥ ಮಾಡಿ ನಮ್ಮ ಭೂಮಿ ನಮ್ಮ ಹಕ್ಕು ಅನ್ಯರಿಗೆ ಮಾರಾಟವಿಲ್ಲ ಎಂಬ ನಾಮಫಲಕಗಳನ್ನು ಊರಿನ ಮುಂದೆ ಹಾಕುವ ಮೂಲಕ ನಮ್ಮೂರಿಗೆ ಬರಬೇಡಿ ತೊಲಗಿ ಎಂದು ಹೇಳುವ ಕಾರ್ಯಕ್ರಮ ಆರಂಭಿಸಲಾಗಿದೆ. ಈ ಹೋರಾಟದ ಮುಂದುವರಿದ ಭಾಗವಾಗಿ ಆ.14 ರಂದು ಮಧ್ಯರಾತ್ರಿ 12 ಗಂಟೆಗೆ ಬೆಂಗಳೂರಿನಲ್ಲಿ ತಮಟೆ ಚಳವಳಿ ಮತ್ತು ಪಂಜಿನ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದರು.
ರೈತರೊಂದಿಗೆ ವಿಚಾರ ಸಂಕಿರಣ: ಆ.29ರಂದು ರಾಜ್ಯದ ಆಯಾ ಜಿಲ್ಲೆಗಳ ಪದಾಧಿಕಾರಿಗಳು ರೈತರೊಂದಿಗೆ ವಿಚಾರ ಸಂಕಿರಣವನ್ನ ನಡೆಸಲಾಗುವುದು. ಜತೆಗೆ ಜಿಲ್ಲೆಯ ಪ್ರತಿ ತಾಲೂಕು ಕೇಂದ್ರಗಳಲ್ಲಿ ಜನ ಸಂಪರ್ಕ ಸಭೆಗಳನ್ನು ನಡೆಸಿ, ಸರ್ಕಾರದ ರೈತ ವಿರೋಧಿ ನೀತಿಗಳನ್ನು ರೈತರಲ್ಲಿ ತುಂಬಿ ತಮ್ಮ ಹೋರಾಟ ತೀವ್ರಗೊಳಿಸಲಾಗುವುದು ಎಂದರು.
ಜನವಿರೋಧಿ ಕಾಯ್ದೆ ಅನುಷ್ಠಾನ: ಸಂಘದ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿವೆ. ಸುಗ್ರೀವಾಜ್ಞೆ ಹೊರಡಿಸುವ ಮೂಲಕ ಕಾಯ್ದೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಇಂತಹ ಜನವಿರೋಧಿ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲು ಮುಂದಾಗಿರುವುದು ಖಂಡನೀಯ. ಹೀಗಾಗಿ ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿಗಳ ವಿರುದ್ಧ ನಿರಂತರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ: ರಾಜ್ಯ ದಲಿತ ಸಂಘರ್ಷ ಸಮಿತಿ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, ರಾಜ್ಯ ಸರ್ಕಾರ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡಿರುವುದು ಸಂಪೂರ್ಣ ಜನವಿರೋಧಿಯಾಗಿದೆ. ಸರ್ಕಾರಗಳಿಗೆ ರೈತರ ಬಗ್ಗೆ ಹಿಂದುಳಿದವರ ಬಗ್ಗೆ ಸ್ವಲ್ಪವೂ ಕರುಣೆಯಿಲ್ಲ, ತಮಗಿಷ್ಟ ಬಂದಹಾಗೆ ಕಾಯ್ದೆಗಳನ್ನು ತಿದ್ದುಪಡಿ ಮಾಡಿಕೊಂಡು, ಯಾರ ಒಪ್ಪಿಗೆಯನ್ನೂ ಒಪಡೆಯದೇ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿದ್ದಾರೆ. ಇದರ ವಿರುದ್ಧ ಸಂಘಟಿತ ಹೋರಾಟ ಮಾಡುವುದರ ಜೊತೆಗೆ ನಮ್ಮ ಹೋರಾಟಕ್ಕೆ ಜಯ ಸಿಗುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.