ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನ ಆರಂಭ(ನವೆಂಬರ್ 29)ವಾಗುವ ಮೊದಲ ದಿನವೇ ನಡೆಸಲು ಉದ್ದೇಶಿಸಿದ್ದ ಟ್ರ್ಯಾಕ್ಟರ್ ಜಾಥಾವನ್ನು ಮುಂದೂಡಲು ನಿರ್ಧರಿಸಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ದರ್ಶನ್ ಪಾಲ್ ಸಿಂಗ್ ಶನಿವಾರ (ನವೆಂಬರ್ 27) ತಿಳಿಸಿದ್ದಾರೆ.
ಇದನ್ನೂ ಓದಿ:ಬದಲಿ ಆಟಗಾರನಾಗಿ ಅವಕಾಶ ಪಡೆದು ಮಿಂಚಿದ ಕೆಎಸ್ ಭರತ್; ಹೊಸ ದಾಖಲೆ
ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದ ನಂತರ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ಕೈಗೊಳ್ಳುವ ಕುರಿತು ರೈತ ಸಂಘಟನೆಗಳು ಚರ್ಚೆ ನಡೆಸಿದ ವೇಳೆ ಈ ನಿರ್ಧಾರ ತೆಗೆದುಕೊಳ್ಳಲಾಯಿತು ಎಂದು ಮಾಹಿತಿ ನೀಡಿದ್ದಾರೆ.
ರೈತರ ಹೋರಾಟ ಒಂದು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ನವೆಂಬರ್ 29ರಿಂದ ಆರಂಭವಾಗಲಿರುವ ಸಂಸತ್ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಪ್ರತಿದಿನ 500 ರೈತರು ಸಂಸತ್ ನೆಡೆಗೆ ಟ್ರ್ಯಾಕ್ಟರ್ ಜಾಥಾ ನಡೆಸಲು ಈ ಮೊದಲು ನಿರ್ಧರಿಸಿದ್ದರು.
ಅಲ್ಲದೇ ಪ್ರತಿಭಟನಾ ನಿರತ ರೈತರ ವಿರುದ್ಧ ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆ ದಾಖಲಿಸಿರುವ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂದು ರೈತ ಸಂಘಟನೆಗಳು ಒತ್ತಾಯಿಸಿವೆ. ಪ್ರತಿಭಟನೆ ಸಂದರ್ಭದಲ್ಲಿ ರೈತರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರ ಮತ್ತು ರೈಲ್ವೆ ಇಲಾಖೆಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ದೇಶನ ನೀಡಬೇಕು ಎಂದು ಸಿಂಗ್ ಒತ್ತಾಯಿಸಿದ್ದಾರೆ.