ಕೊಪ್ಪಳ: ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಮತ್ತೆ ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ನಡೆಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ಕೊಪ್ಪಳದ ರೈತನೊಬ್ಬ ನಮ್ಮೂರಿನ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಸಮಸ್ಯೆ ಆಲಿಸಿ ಎಂದು ಸಿಎಂ ಅವರಿಗೆ ಟ್ವೀಟ್ ಮಾಡಿದ್ದಾರೆ. ತಾಲೂಕಿನ ಬೆಟಗೇರಿ ಗ್ರಾಮದ ರೈತ ಏಳಕೋಟೇಶ ಕೋಮಲಾಪುರ ಅವರು ನಮ್ಮ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯನ್ನು 1966ರಲ್ಲಿಯೇ ಕಟ್ಟಲಾಗಿದೆ. ಈ ಶಾಲೆ 50 ವರ್ಷ ಪೂರೈಸಿದೆ. ಈ ಶಾಲೆಯಲ್ಲಿ ಕಲಿತ ಹಲವು ವಿದ್ಯಾರ್ಥಿಗಳು ಶಾಸಕ, ವಿಧಾನ ಪರಿಷತ್ ಸದಸ್ಯ ಸೇರಿದಂತೆ ವಿವಿಧ ಉನ್ನತ ಸ್ಥಾನದಲ್ಲಿ ಕೆಲಸ ಮಾಡುತ್ತಿದ್ದಾರೆ. ಅಂತಹ ಶಾಲೆಗೆ ತುಂಬ ಮಹತ್ವವಿದೆ. ಇಂತಹ ಗ್ರಾಮೀಣ ಪ್ರದೇಶದಲ್ಲಿನ ಶಾಲೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ವಾಸ್ತವ್ಯ ಮಾಡಿ ಇಲ್ಲಿನ ಜನರ ಸಮಸ್ಯೆ ಆಲಿಸಿ, ಶಿಕ್ಷಣ ವ್ಯವಸ್ಥೆ ತಿಳಿದು ವಿದ್ಯಾರ್ಥಿಗಳ ಬೇಡಿಕೆ ಈಡೇರಿಸಬೇಕೆಂದು ಟ್ವೀಟ್ ಮೂಲಕ ಸಿಎಂ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ತಾನು ಮಾಡಿದ ಟ್ವೀಟ್ನ್ನು ಸಿಎಂ ಅವರಿಗೆ ಟ್ಯಾಗ್ ಮಾಡಿದ್ದಾರೆ.