ಹುಬ್ಬಳ್ಳಿ: ಪ್ರವಾಹದ ಬಳಿಕ ಸಾಂಕ್ರಾಮಿಕ ರೋಗ ಭೀತಿ ಜನರಲ್ಲಿ ಮೂಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಫಾಗಿಂಗ್ ಮಾಡುವಂತೆ ಶಾಸಕ ಪ್ರಸಾದ ಅಬ್ಬಯ್ಯ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಲ್ಲಿನ ಪಾಲಿಕೆ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಮಾತನಾಡಿದ ಅವರು, ಮಳೆಯಿಂದಾಗಿ ಹಳೇ ಹುಬ್ಬಳ್ಳಿ ಭಾಗದಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಕೆಲ ಭಾಗದಲ್ಲಿ ಮನೆಗಳು, ಬೀದಿಗಳಲ್ಲಿ ಮಳೆ ನೀರು ನುಗ್ಗಿ ಸಾಕಷ್ಟು ಸಮಸ್ಯೆಯಾಗಿತ್ತು. ಇದೀಗ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ಸಂಗ್ರಹವಾಗಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಉಂಟಾಗಿದ್ದು, ಕೂಡಲೇ ಫಾಗಿಂಗ್ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು.
ಪ್ರವಾಹದ ನಂತರದಲ್ಲಿ ಸಾಮಾನ್ಯವಾಗಿ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುವ ಸಾಧ್ಯತೆಗಳೇ ಹೆಚ್ಚು. ಹೀಗಾಗಿ ಸಾಂಕ್ರಾಮಿಕ ರೋಗಗಳ ತಡೆಗಟ್ಟುವಲ್ಲಿ ಮೊದಲ ಆದ್ಯತೆ ನೀಡಬೇಕು. ಪಾಲಿಕೆಯಿಂದ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಆದ್ಯತೆ ಮೇರೆಗೆ ಗಟಾರು, ಚರಂಡಿ ಸ್ವಚ್ಛತೆಗೂ ಒತ್ತು ನೀಡಬೇಕು. ಈ ಕುರಿತು ಕೈಗೊಳ್ಳುವ ಕಾರ್ಯಗಳ ಬಗ್ಗೆ ನಿತ್ಯ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಪಾಲಿಕೆ ಆಯುಕ್ತ ಸುರೇಶ ಇಟ್ನಾಳ ಮಾತನಾಡಿ, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳ ಸ್ವಚ್ಛತೆಗೆ ಹೆಚ್ಚಿನ ಒತ್ತು ನೀಡಿದ್ದು, ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಲಾಗಿದೆ. ಸಾಂಕ್ರಾಮಿಕ ರೋಗಗಳ ಕುರಿತು ಪಾಲಿಕೆ ಗಂಭೀರವಾಗಿ ತೆಗೆದುಕೊಂಡಿದೆ ಎಂದು ತಿಳಿಸಿದರು.
ಹೆಚ್ಚುವರಿ ಆಯುಕ್ತ ಅಜೀಜ್ ದೇಸಾಯಿ ಸೇರಿದಂತೆ ವಲಯ ಅಧಿಕಾರಿಗಳು, ವಿದ್ಯುತ್ ವಿಭಾಗದ ಅಧಿಕಾರಿಗಳು ಇದ್ದರು.