ಮೈಸೂರು: ಮುಂಗಾರು ಮಳೆಯಿಂದ ವಾತಾವರಣ ಬದಲಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಇರುವುದರಿಂದ ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಜಾಗೃತಿವಹಿಸುವುದು ಅಗತ್ಯ ಎಂದು ಜಿಲ್ಲಾ ಪಂಚಾಯತ್ ಸಿಇಒ ಕೆ.ಜ್ಯೋತಿ ಹೇಳಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿರುವ ಆರೋಗ್ಯ, ನೈರ್ಮಲ್ಯ ಮತ್ತಿತರ ಕಾರ್ಯಕ್ರಮಗಳ ಕುರಿತ ವಸ್ತು ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.
ವಾತಾವರಣ ಬದಲಾವಣೆಯಿಂದ ಈ ಸಮಯದಲ್ಲಿ ಸಾಂಕ್ರಾಮಿಕ ಕಾಯಿಲೆ ಹರಡುವ ಭೀತಿಯಿದ್ದು ಆರೋಗ್ಯ ಮತ್ತು ನೈರ್ಮಲ್ಯ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ. ಸಾರ್ವಜನಿಕರು ಮಾಹಿತಿ ಪಡೆದುಕೊಂಡು, ಆರೋಗ್ಯಕ್ಕೆ ಸಂಬಂಧಿಸಿದಂತೆ ಪ್ರತಿಯೊಬ್ಬರೂ ಹೆಚ್ಚಿನ ಜಾಗೃತಿ ವಹಿಸುವುದು ಅತ್ಯಗತ್ಯ ಎಂದು ಹೇಳಿದರು.
ಸ್ವಚ್ಛತೆ ಕಾಪಾಡಿ: ಒಣ ಕಸ ಹಾಗೂ ಹಸಿ ಕಸಗಳ ವಿಲೇವಾರಿ, ಸ್ವಚ್ಛತೆ ಮಾಹಿತಿ, ಗರ್ಭಿಣಿಯರು , ಮಕ್ಕಳು, ತಾಯಂದಿರ ಆರೋಗ್ಯ ಕಾಪಾಡಲು ಮಾಹಿತಿ ಮತ್ತು ಡೆಂ à, ಚಿಕೂನ್‌ಗೂನ್ಯಾ ಕಾಯಿಲೆಗಳ ಹರಡುವಿಕೆ ಮಾಹಿತಿ, ಹೀಗೆ ಹಲವಾರು ಮಾಹಿತಿಗಳನ್ನು ನೀಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಜಿಲ್ಲೆಯ ಬಸ್ ನಿಲ್ದಾಣಗಳಲ್ಲಿ ಈ ಕಾರ್ಯಕ್ರಮ ಆಯೋಜಿಸಿದ್ದು, ತಾಲೂಕು ಮಟ್ಟಗಳಲ್ಲೂ ಸಹ ಆರೋಗ್ಯ ಜಾಗೃತಿ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ಸಿಬ್ಬಂದಿ, ತಾಲೂಕು ಪಂಚಾಯತ್ ಇಒ ಹಾಗೂ ಆರೋಗ್ಯ ಅಧಿಕಾರಿಗಳ ಜೊತೆಗೂಡಿ ನಡೆಸುತ್ತಿದ್ದಾರೆ. ಹಾಗಾಗಿ ಪ್ರತಿಯೊಬ್ಬರೂ ಆರೋಗ್ಯದ ಮಾಹಿತಿ ಪಡೆದು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ತಿಳಿಸಿದರು.
ವಸ್ತು ಪ್ರದರ್ಶನ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಮಾತನಾಡಿ, ಡೆಂಘೀ ಹಾಗೂ ಚಿಕೂನ್‌ಗುನ್ಯಾ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಹಾಗೂ ನೈರ್ಮಲ್ಯ ಕಾಪಾಡುವ ಹಲವಾರು ಮಾಹಿತಿಗಳನ್ನು ವಸ್ತು ಪ್ರದರ್ಶನದಲ್ಲಿ ಒದಗಿಸಲಾಗಿದ್ದು, ಸಾರ್ವಜನಿಕರು 2 ದಿನಗಳು ನಡೆಯುವ ಈ ಕಾರ್ಯಕ್ರಮದಲ್ಲಿ ಮಾಹಿತಿ ಪಡೆದುಕೊಳ್ಳಬೇಕು ಎಂದು ಕೋರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ರವಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಪ್ರಕಾಶ್ ಎಸ್., ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವೇಣುಗೋಪಾಲ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ರಾಜು ಆರ್. ಹಾಗೂ ಕ್ಷೇತ್ರ ಆರೋಗ್ಯ ಶಿಕ್ಷಾಣಾಧಿಕಾರಿಗಳಾದ ಉದಯಕುಮಾರ್, ರಾಜೇಶ್ವರಿ ಹಾಜರಿದ್ದರು.