ವಿಜಯವಾಡ: ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಆಂಧ್ರಪ್ರದೇಶದ ಜಗನ್ಮೋಹನ್ ರೆಡ್ಡಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಪ್ರತಿಭಟನೆ ಇಳಿದಿದೆ.
ಇದರ ಮುಂದುವರೆದ ಭಾಗವಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈಎಸ್ ಶರ್ಮಿಳಾ ರೆಡ್ಡಿ (ಸಿಎಂ ಜಗನ್ಮೋಹನ್ ಸಹೋದರಿ) ಗುರುವಾರ ವಿಜಯವಾಡದಲ್ಲಿ ‘ಚಲೋ ಸೆಕ್ರೆಟರಿಯೇಟ್’ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಇದರ ಹಿನ್ನೆಲೆಯಲ್ಲಿ ಆಂಧ್ರ ಮುಖ್ಯಮಂತ್ರಿಗಳು ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತಡೆಯಲು ರಾಜ್ಯಾದ್ಯಂತ ಕಾಂಗ್ರೆಸ್ ಮುಖಂಡರನ್ನು ಬಂಧಿಸಿ ‘ಗೃಹಬಂಧನ’ದಲ್ಲಿ ಇರಿಸಲು ಆದೇಶ ನೀಡಿದ್ದಾರೆ. ಇದರ ಬಗ್ಗೆ ಆರೋಪ ಎತ್ತಿರುವ ಜಗನ್ ಸಹೋದರಿ ಶರ್ಮಿಳಾ ಗೃಹ ಬಂಧನದಿಂದ ಪಾರಾಗಲು ಕಾಂಗ್ರೆಸ್ ಕಚೇರಿಯಲ್ಲೇ ರಾತ್ರಿ ಇಡೀ ಕಳೆದಿದ್ದಾರೆ.
ವಿಜಯವಾಡದ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್.ಶರ್ಮಿಳಾ ರೆಡ್ಡಿ ಮಲಗಿರುವ ವಿಡಿಯೋ ವೈರಲ್ ಆಗಿದೆ.
ರಾಜ್ಯ ಸರಕಾರ ಮೊದಲು ನಿರುದ್ಯೋಗಿ ಯುವಕರು ಮತ್ತು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದ ಶರ್ಮಿಳಾ ಆಡಳಿತ ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಜಯವಾಡದ ಆಂಧ್ರರತ್ನ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಲ್ಲಿ ಯುವಕರು, ನಿರುದ್ಯೋಗಿಗಳು ಮತ್ತು ವಿದ್ಯಾರ್ಥಿಗಳ ಪ್ರಮುಖ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಹೇಳಿದ್ದಾರೆ.
ಈ ಕುರಿತು ತಮ್ಮ X ಖಾತೆಯಲ್ಲಿ ಬರೆದಿರುವ ಶರ್ಮಿಳಾ ‘ನಾವು ನಿರುದ್ಯೋಗಿಗಳ ಪರವಾಗಿ ಪ್ರತಿಭಟನೆಗೆ ಕರೆ ನೀಡಿದರೆ, ನೀವು ನಮ್ಮನ್ನು ಗೃಹಬಂಧನದಲ್ಲಿ ಇರಿಸಲು ಪ್ರಯತ್ನಿಸುತ್ತೀರಾ? ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡುವ ಹಕ್ಕು ನಮಗಿಲ್ಲವೇ? ನಾಚಿಕೆಗೇಡಿನ ಸಂಗತಿಯಲ್ಲವೇ ಮಹಿಳೆಯಾಗಿ ನಾನು ಪೊಲೀಸರಿಂದ ತಪ್ಪಿಸಿಕೊಳ್ಳಲು ಮತ್ತು ಗೃಹಬಂಧನವನ್ನು ತಪ್ಪಿಸಲು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ರಾತ್ರಿ ಕಳೆಯುವ ಸ್ಥಿತಿ ಬಂದಿದೆ ಎಂದು ಬರೆದುಕೊಂಡಿದ್ದಾರೆ.