Advertisement

ಹೆಣ್ಣು ಭ್ರೂಣ ಹತ್ಯೆ ಇನ್ನೂ ಜೀವಂತ

10:17 AM Sep 07, 2019 | Suhan S |

ಬಾಗಲಕೋಟೆ: ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಶೇಕಡಾ ವಾರು ಪ್ರಮಾಣದಲ್ಲಿ ಪುರುಷರಿಗಿಂತ ಹೆಣ್ಣಿನ ಸಂಖ್ಯೆ ಕಡಿಮೆ ಇದೆ. ಇದಕ್ಕೆ ಹೆಣ್ಣೂ ಭ್ರೂಣ ಹತ್ಯೆ ಕಾರಣವಾಗಿದ್ದು, ಇದನ್ನು ತಡೆಗಟ್ಟುವ ಕೆಲಸವಾಗಬೇಕು. ಈ ಕುರಿತು ಜನರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ಹೇಳಿದರು.

Advertisement

ಜಿಪಂ ಸಭಾಭವನದಲ್ಲಿ ಶುಕ್ರವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು. ಹರಿಯಾಣದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆಯಾದ ಹಿನ್ನಲೆಯಲ್ಲಿ ಬೇರೆ ರಾಜ್ಯದ ಹೆಣ್ಣು ಮಕ್ಕಳನ್ನು ವಧು ದಕ್ಷಿಣೆ ಕೊಟ್ಟು ಮದುವೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ ಮಾಡುವ ಮೂಲಕ ಇಂತಹ ಪರಿಸ್ಥಿತಿಗೆ ನಾವೇ ಕಾರಣಿಭೂತರಾಗುತ್ತಿದ್ದೇವೆ ಎಂದರು.

ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಸಮಾಜ ಕಾರ್ಯಕರ್ತರಿಗೆ ವರದಕ್ಷಿಣೆ, ಮಹಿಳೆಯರ ಮಾರಾಟ ಮತ್ತು ಮಕ್ಕಳ ಸಾಗಾಣಿಕೆ ನಿಷೇಧ ಕಾಯ್ದೆ ಕುರಿತು ತರಬೇತಿ ಅಗತ್ಯವಾಗಿದೆ. ಈ ಕುರಿತು ಜಿಲ್ಲಾ ಮಟ್ಟದಲ್ಲಿ ತರಬೇತಿ ಏರ್ಪಡಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಿಗೆ ಸೂಚಿಸಿದರು.

ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯ ವಿವಾಹ, ಹೆಣ್ಣು ಭ್ರೂಣಹತ್ಯೆ ಸೇರಿದಂತೆ ಇತರೆ ನಿಷೇಧ ಕಾಯ್ದೆಗಳನ್ನು ಅನುಷ್ಠಾನಕ್ಕೆ ತರಲಾಗುತ್ತಿದೆ. ಆಸ್ಪತ್ರೆಗಳಲ್ಲಿ ವಯಸ್ಸಿನ ದೃಢೀಕರಣ ಪತ್ರ ನೀಡದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು. ಇಂತಹ ಅನಿಷ್ಠ ಪದ್ಧತಿಗಳು ಗ್ರಾಮೀಣ ಭಾಗದ ಜನರಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ತಿಳಿಸಿದರು.

ಜಿಲ್ಲೆಯಲ್ಲಿ ಒಟ್ಟು 4,879 ಸ್ತ್ರೀಶಕ್ತಿ ಗುಂಪುಗಳಿದ್ದು, ಅದರಲ್ಲಿ 970 ಪರಿಶಿಷ್ಟ ಜಾತಿ, 510 ಪರಿಶಿಷ್ಟ ಪಂಗಡ, 80 ಅಲ್ಪಸಂಖ್ಯಾತರು ಹಾಗೂ 3,319 ಇತರೆ ಜಾತಿಗೆ ಸೇರಿದ ಗುಂಪುಗಳಿವೆ. ಒಟ್ಟು 61.15 ಕೋಟಿ ರೂ.ಗಳನ್ನು ಉಳಿತಾಯ ಮಾಡಿದ್ದು, 4,232 ಗುಂಪುಗಳು ಬ್ಯಾಂಕ್‌ನಿಂದ ಒಟ್ಟು 55.33 ಕೋಟಿ ರೂ.ಗಳ ಸಾಲ ಪಡೆದುಕೊಂಡಿದ್ದಾರೆ ಎಂದು ಸಭೆಗೆ ಎ.ಕೆ. ಬಸಣ್ಣವರ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಜಗದೀಶ ಹೆಬ್ಬಳ್ಳಿ ಮಾತನಾಡಿದರು. ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತಾ ಲಕ್ಷ್ಮಣ ದಡ್ಡಿ, ಜಿಪಂ ಉಪಕಾರ್ಯದರ್ಶಿ ಎ.ಜಿ.ತೋಟದ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ, ಡಾ| ಅನಂತ ದೇಸಾಯಿ ಇದ್ದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಸಾಂತ್ವನ ಯೋಜನೆಯಡಿ ಒಟ್ಟು 573 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 339 ಪ್ರಕರಣಗಳು ಇತ್ಯರ್ಥಗೊಂಡಿವೆ. 234 ಬಾಕಿ ಉಳಿದಿವೆ. ವರದಕ್ಷಿಣೆ ನಿಷೇಧ ಕಾಯ್ದೆಯಡಿ ಜಿಲ್ಲೆಯಲ್ಲಿ ಒಟ್ಟು 41 ಪ್ರಕರಣಗಳು ದಾಖಲಾಗಿದ್ದು, 41 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರಿ ಉಪನಿರ್ದೇಶಕ ಎ.ಕೆ. ಬಸಣ್ಣವರ ತಿಳಿಸಿದರು.
Advertisement
Advertisement

Udayavani is now on Telegram. Click here to join our channel and stay updated with the latest news.

Next