ಚಿಕ್ಕಮಗಳೂರು: ಕೋವಿಡ್-19 ಸೋಂಕಿನ ನಿಯಂತ್ರಣಕ್ಕೆ ಪ್ರಾಣ ಲೆಕ್ಕಿಸದೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಇಲಾಖೆ ಗುತ್ತಿಗೆ ನೌಕರರ ಬೇಡಿಕೆಯನ್ನು ಸರ್ಕಾರ ಶೀಘ್ರ ಪೂರೈಸಬೇಕು. ಇಲ್ಲದಿದ್ದರೆ ಸರ್ಕಾರ ತಮ್ಮ ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಸುವುದಾಗಿ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು, ಹೊರಗುತ್ತಿಗೆ ನೌಕರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರು ಪ್ರಾರಂಭಿಸಿದ ಅಸಹಕಾರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿ ಮಾತನಾಡಿದ ಗುತ್ತಿಗೆ ನೌಕರರು, ಆರೋಗ್ಯ ಇಲಾಖೆ ಖಾಯಂ ನೌಕರರು ಮತ್ತು ಗುತ್ತಿಗೆ ನೌಕರರ ನಡುವೆ ಉದ್ಯೋಗ ಭದ್ರತೆ, ವಿಮೆ ಸೌಲಭ್ಯ ಮತ್ತು ವೇತನ ನೀಡುವ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದರು.
ಕೋವಿಡ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಕೋವಿಡ್ ವಾರಿಯರ್ಸ್ ಗಳ ಪೈಕಿ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿ ಪೈಕಿ ಗುತ್ತಿಗೆ ಹಾಗೂ ಹೊರಗುತ್ತಿಗೆಯಡಿ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಸರ್ಕಾರ ವೇತನ ಸೇರಿದಂತೆ ವಿವಿಧ ಸೌಲಭ್ಯಗಳ ವಿಚಾರದಲ್ಲಿ ತಾರತಮ್ಯ ನೀತಿ ಅನುಸರಿಸುತ್ತಿದೆ. ಬೇಡಿಕೆಗಳನ್ನು ಈಡೇರಿಸುವ ಭರವಸೆಯನ್ನು ಸರ್ಕಾರ ನೀಡಿದ್ದರೂ ಇದುವರೆಗೂ ಬೇಡಿಕೆಗಳನ್ನು ಈಡೇರಿಸಿಲ್ಲವೆಂದು ತಮ್ಮ ಅಳಲು ತೋಡಿಕೊಂಡರು.
ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ವೈದ್ಯರು, ನರ್ಸ್‌ಗಳು, ಫಾರ್ಮಾಸಿಸ್ಟ್‌ಗಳು, ಲ್ಯಾಬ್ ಟೆಕ್ನಿಶಿಯನ್ಸ್ ಮತ್ತಿತರ ನೌಕರರು ಕೆಲಸಮಾಡುತ್ತಿದ್ದಾರೆ. ಈ ಸಿಬ್ಬಂದಿಗೆ ಖಾಯಂ ನೌಕರರಿಗೆ ನೀಡುತ್ತಿರುವ ವೇತನಕ್ಕಿಂತಲೂ ಕಡಿಮೆ ವೇತನ ನೀಡಲಾಗುತ್ತಿದೆ. ಸರ್ಕಾರಿ ವೈದ್ಯಕೀಯೇತರ ಸಿಬ್ಬಂದಿಗೆ 18 ಸಾವಿರ ವೇತನ ನೀಡುತ್ತಿದೆ. ಆದರೆ ವೈದ್ಯಕೀಯ ಸಿಬ್ಬಂದಿಗೆ 9 ರಿಂದ 14 ಸಾವಿರ ರೂ. ವೇತನ ನೀಡಲಾಗುತ್ತಿದೆ. ಸರ್ಕಾರ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸರ್ಕಾರಿ ವೈದ್ಯರ ಬೇಡಿಕೆಗಳನ್ನು ಈಡೇರಿಸಿದೆ. ಆದರೆ ಹೊರಗುತ್ತಿಗೆ, ಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ ಎಂದರು.
ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಶಾಂತಿಯುತವಾಗಿ ಅಸಹಕಾರ ಹೋರಾಟ ಮಾಡುತ್ತಿದ್ದರೂ ಸರ್ಕಾರಿ ವೈದ್ಯಾಧಿ ಕಾರಿಗಳ ಮೂಲಕ ನೋಟಿಸ್ ನೀಡುತ್ತಾ ಕೆಲಸದಿಂದ ಕಿತ್ತು ಹಾಕುವ ಬೆದರಿಕೆ ಹಾಕಲಾಗುತ್ತಿದೆ. ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸರಕಾರ ಸದ್ಯ ನೀಡುತ್ತಿರುವ ವೇತನದಿಂದ ಬದುಕು ನಡೆಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೂಡಲೇ ಈ ನೌಕರರ ವೇತನವನ್ನು ಹೆಚ್ಚಿಸುವುದರೊಂದಿಗೆ ನೌಕರರು ಮೃತಪಟ್ಟಲ್ಲಿ 50 ಲಕ್ಷ ರೂ. ಪರಿಹಾರಧನ ನೀಡುವ ಯೋಜನೆಯನ್ನು ಗುತ್ತಿಗೆ, ಹೊರಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು. ಗುತ್ತಿಗೆ ನೌಕರರಿಗೆ ಭತ್ಯೆ, ರಜೆ, ಪದೋನ್ನತಿ, ವರ್ಗಾವಣೆ, ಸಮಾನ ಕೆಲಸಕ್ಕೆ ಸಮಾನ ವೇತನ, ಪರಿಷ್ಕೃತ ವೇತನ, ವೈದ್ಯಕೀಯ ಸೌಲಭ್ಯ, ಬ್ಯಾಂಕ್ ಸಾಲ ಸೌಲಭ್ಯ ಸೇರಿದಂತೆ ಹೊರಗುತ್ತಿಗೆ ಪದ್ಧತಿಯನ್ನೂ ಕೈಬಿಡಬೇಕೆಂದ ಅವರು, ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ಹೊರಗುತ್ತಿಗೆ ನೌಕರರಾದ ಜ್ಯೋತಿ, ಅಂಜಲಿ, ಪ್ರಥಮ್, ನಿತ್ಯಾ, ಗಿರೀಶ್, ಡಾ| ಸುಭಾಷ್, ದೀಪು, ವೆಂಕಟೇಶ್, ಮಧು, ಸಂತೋಷ್, ರಘು, ಚೇತನ್, ಪ್ರಕಾಶ್, ಹೂವಣ್ಣ, ಮುಂಜುನಾಥ್ ಇದ್ದರು.