ಬೀದರ: ಬಾಲ್ಯ ವಿವಾಹಗಳನ್ನು ತಡೆಗಟ್ಟಲು ವಿವಿಧ ಇಲಾಖೆಗಳಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳೆಂದು ಸರ್ಕಾರ ಗುರುತಿಸಿದೆ. ಗ್ರಾಮ ಮಟ್ಟದ ಬಾಲ್ಯವಿವಾಹ ನಿಷೇದಾಧಿಕಾರಿಗಳಾದ ಪಿಡಿಒ, ಶಾಲಾ ಮುಖ್ಯಗುರು ಮತ್ತು ಗ್ರಾಮ ಲೆಕ್ಕಿಗರು ಬಾಲ್ಯ ವಿವಾಹವನ್ನು ತಡೆಗಟ್ಟುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ಜಯಶ್ರೀ ಹೇಳಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ಮಕ್ಕಳ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಗತಿ ಪರಿಶೀಲನೆ ನಡೆಸಿಮಾತನಾಡಿದ ಅವರು, ಎಲ್ಲಿಯಾದರೂ ಬಾಲ್ಯವಿವಾಹಗಳು ಜರುಗಿದಲ್ಲಿ ಸಂಬಂ ಧಿಸಿದವರ ವಿರುದ್ಧ ಮುಲಾಜಿಲ್ಲದೇ ಪ್ರಕರಣ ದಾಖಲಿಸಬೇಕು ಎಂದು ಸೂಚಿಸಿದರು.
ಈ ವೇಳೆ ಜಿಪಂ ಸಿಇಒ ಜ್ಞಾನೇಂದ್ರಕುಮಾರ ಗಂಗವಾರ್ ಮಾತನಾಡಿ, ಬೇಸಿಗೆ ಕಾಲದಲ್ಲಿ ಮದುವೆಗಳು ಹೆಚ್ಚು ಸಂಖ್ಯೆಯಲ್ಲಿ ನಡೆಯುತ್ತವೆ. ಬಾಲ್ಯವಿವಾಹ ತಡೆಗಟ್ಟಲು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಡಂಗೂರು ಸಾರಲು ಕ್ರಮ ವಹಿಸುವುದಾಗಿ ತಿಳಿಸಿದರು.
ಜಿಲ್ಲೆಯಲ್ಲಿ ಪ್ರತಿ ತಿಂಗಳು ಬಾಲಕಾರ್ಮಿಕ ಮಕ್ಕಳ ರಕ್ಷಣೆಗಾಗಿ ಕಾರ್ಯಾಚಾರಣೆ ಕೈಗೊಂಡು, ಇಂತಹ ಮಕ್ಕಳನ್ನು ಕಡ್ಡಾಯವಾಗಿ ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ, ಮುಂದಿನ ರಕ್ಷಣೆ ಮತ್ತು ಪೋಷಣೆಗಾಗಿ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ, ಬಾಲಕಾರ್ಮಿಕ ಮಕ್ಕಳ ರಕ್ಷಣೆಗಾಗಿ ಕಾರ್ಯಾಚಾರಣೆ ಕೈಗೊಳ್ಳಬೇಕೆಂದು ಡಾ| ಜಯಶ್ರೀ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ, ಸಕ್ಕರೆ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ವಲಸೆ ಕಾರ್ಮಿಕ ಮಕ್ಕಳಿಗೆ ಟೆಂಟ್ ಶಾಲೆಯನ್ನು ಪ್ರಾರಂಭಿಸಿರುವುದು, ಬಿಸಿಯೂಟ ವಿತರಣೆ ಹಾಗೂ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಹೆಚ್ಚಳದ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ಅಧಿಕಾರಿಗಳಿಂದ ವಿವರಣೆ ಪಡೆದರು. ಈ ವೇಳೆ ಡಿಡಿಪಿಐ ಮಾತನಾಡಿ, ಶಾಲೆಯಿಂದ ಹೊರಗುಳಿದ ಮಕ್ಕಳ ಸಮೀಕ್ಷೆ ಕಾರ್ಯ ಚಾಲ್ತಿಯಲ್ಲಿದೆ. ಸಕ್ಕರೆ ಕಾರ್ಖಾನೆಯ ವಲಸೆ ಕಾರ್ಮಿಕರ ಮಕ್ಕಳಿಗೆ ಟೆಂಟ್ ಶಾಲೆಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು. ಎಲ್ಲ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಬಿಸಿಯೂಟ ವಿತರಣೆ ಮಾಡಬೇಕೆಂದು ಈಗಾಗಲೇ ಸಭೆಗಳನ್ನು ಕರೆದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಮಸ್ಯೆ ಇರುವ ಶಾಲೆಗಳ ಮಾಹಿತಿ ಪಡೆದು, ಸಂಬಂಧಿ ಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಮತ್ತು ಬಿಸಿಎಂ ಇಲಾಖೆಯಡಿ ನಡೆಯುವ ವಸತಿ ನಿಲಯಗಳ ಹೆಣ್ಣು ಮಕ್ಕಳಿಗೆ ಸ್ಯಾನೀಟರ್ ನ್ಯಾಪಕಿನ್ ಸೌಲಭ್ಯ ಒದಗಿಸಬೇಕು. ಅಲ್ಲದೇ ಉತ್ತಮ ಗುಣಮಟ್ಟದ ಆಹಾರ ವಿತರಿಸಬೇಕೆಂದು ಸಂಬಂಧಿ ಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳು ಕಡಿಮೆ ಸಂಖ್ಯೆಯಲ್ಲಿ ಬರುತ್ತಿರುವುದು ಕಂಡುಬಂದಿದೆ.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ತಿಳಿಸಿದರು.