ಕಲಬುರಗಿ: ಕಲ್ಯಾಣ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ತಿಂಗಳೊಳಗೆ ಭರ್ತಿ ಮಾಡಿಕೊಳ್ಳಬೇಕು ಎಂಬುದಾಗಿ 371ನೇ (ಜೆ) ಅಡಿಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶಕ್ಕೆ ನೀಡಿರುವ ವಿಶೇಷ ಸ್ಥಾನಮಾನದ ಅಡಿಯಲ್ಲಿ ಹೊರಡಿಸಲಾದ ಆದೇಶಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಮತ್ತು ಪರಾಮರ್ಶಿಸುವ ಕುರಿತ ಸಚಿವ ಸಂಪುಟ ಉಪ ಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದೆ.
ಗುರುವಾರ ಬೆಂಗಳೂರಿನ ವಿಕಾಸ ಸೌಧದಲ್ಲಿ ಸಮಿತಿ ಅಧ್ಯಕ್ಷ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 371ನೇ (ಜೆ) ಕಾರ್ಯಾನುಷ್ಠಾನದಲ್ಲಿ ಆಗುತ್ತಿರುವ ತೊಡಕುಗಳು ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿವರವಾಗಿ ಚರ್ಚಿಸಲಾಯಿತು.
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಿರ್ಲಕ್ಷ್ಯ ವಹಿಸುತ್ತಿರುವುದನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು. ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಯಾವುದೇ ನಿರ್ಬಂಧ ಹೇರಿಲ್ಲ ಎಂಬುದು ಸಮಿತಿ ಗಮನಕ್ಕೆ ತರಲಾಯಿತು. ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯೇ ಹಸಿರು ನಿಶಾನೆ ನೀಡಿದ್ದರಿಂದ ತಿಂಗಳೊಳಗೆ ಖಾಲಿ ಹುದ್ದೆಗಳ ನೇಮಕವಾಗಲಿ ಎಂದು ಉಪಸಮಿತಿ ಪ್ರಸ್ತಾಪಿಸಿ, ನಿರ್ಣಯ ಕೈಗೊಂಡಿತು.
ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಖಾಲಿ ಇರುವ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು. ನೇಮಕಾತಿಯಲ್ಲಿ ಕಲ್ಯಾಣ ಕರ್ನಾಟಕ ಹೊರತುಪಡಿಸಿ ಇತರ ಜಿಲ್ಲೆಗಳಲ್ಲೂ ಅರ್ಹರಿಗೆ ಅವಕಾಶ ಕಲ್ಪಿಸುವುದು ಹಾಗೂ ನೇಮಕಾತಿ ಸಂಬಂಧ ಸಿಬ್ಬಂದಿ, ಆಡಳಿತ ಸುಧಾರಣೆ ಇಲಾಖೆ 2016 ಮತ್ತು 2020ರಲ್ಲಿ ಹೊರಡಿಸಿರುವ ಅ ಧಿಸೂಚನೆಗಳನ್ನು ಪರಾಮರ್ಶಿಸಲು ಮುಂದಿನ ಸಮಿತಿ ಸಭೆ ಎದುರು ವಿಷಯ ಮಂಡಿಸುವಂತೆ ಸಭೆಯ ಗಮನ ತರಲಾಯಿತು.
ಈ ಸಂದರ್ಭದಲ್ಲಿ ಸಾರಿಗೆ ಸಚಿವರು ಹಾಗೂ ಸಮಿತಿ ಅಧ್ಯಕ್ಷರಾದ ಬಿ. ಶ್ರೀರಾಮುಲು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ, ಶಾಲಿನಿ ರಜನೀಶ್ ಹಾಗೂ ಇನ್ನಿತರರು ಇದ್ದರು.