ರಾಯಚೂರು: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಗೆ ಸಂಬಂಧಿಸಿದ ಬಾಕಿ ಕಾರ್ಯಕ್ರಮಗಳನ್ನು ಫೆಬ್ರವರಿ ತಿಂಗಳ ಅಂತ್ಯದೊಳಗೆ ಮುಗಿಸುವಂತೆ ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ 2021-22ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದವರು ವಾಸಿಸುತ್ತಿರುವ ಕಾಲೋನಿಗಳ ಅಭಿವೃದ್ಧಿಗೆ ಬಿಡುಗಡೆಯಾಗುವ ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಸಮರ್ಪಕವಾಗಿ ಬಳಸಬೇಕು. ನಿಗದಿತ ಅವಧಿಯಲ್ಲಿ ಕಾರ್ಯಕ್ರಮ ಮುಗಿಸಬೇಕು. ಈ ಸಮುದಾಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳ ಸೌಲಭ್ಯ ವಿತರಿಸಬೇಕು. ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನ ಸರಿಯಾಗಿ ಬಳಸದಿದ್ದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಎಚ್ಚರಿಸಿದರು.
ಪರಿಶಿಷ್ಟ ಜಾತಿ ಮತ್ತು ಗಿರಿಜನ ಉಪಯೋಜನೆಯಲ್ಲಿ ಬಿಡುಗಡೆಯಾದ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡಬೇಕು. ಇಲ್ಲದಿದ್ದಲ್ಲಿ ಆ ಅನುದಾನ ವಾಪಸಾಗಲಿದೆ. ಆದಕಾರಣ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಹಕಾರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಸೇರಿದಂತೆ ಇತರೆ ಇಲಾಖೆಗಳು ಎಸ್ ಸಿಪಿ ಮತ್ತು ಟಿಎಸ್‌ಪಿ ಯೊಜನೆಯಡಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಸೂಚಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ರಾಮಕೃಷ್ಣ, ಡಿಡಿಪಿಐ ವೃಷಭೇಂದ್ರಯ್ಯ ಸ್ವಾಮಿ, ನಗರಸಭೆ ಪೌರಾಯುಕ್ತ ಕೆ.ಮುನಿಸ್ವಾಮಿ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಶರಣಪ್ಪ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ನಯಿಂ ಹುಸೇನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಳಾ ವಿ.ನಾಯಕ ಇದ್ದರು.