Advertisement

ಡಿಕೆಶಿ ವಿರುದ್ಧ ಎಫ್ಐಆರ್‌: ಸಿಬಿಐಗೆ ಹೈಕೋರ್ಟ್‌ ನೋಟಿಸ್‌

10:32 PM Aug 01, 2022 | Team Udayavani |

ಬೆಂಗಳೂರು: ಆದಾಯ ಮೀರಿ ಆಸ್ತಿ ಸಂಪಾದಿಸಿದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ವಿರುದ್ಧ ದಾಖಲಿಸಿರುವ ಎಫ್ಐಆರ್‌ ಸಂಬಂಧ ಸಿಬಿಐಗೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Advertisement

ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್ಆರ್‌ಐ ರದ್ದುಪಡಿಸುವಂತೆ ಕೋರಿ ಡಿ.ಕೆ. ಶಿವಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಈ ವೇಳೆ ಡಿ.ಕೆ. ಶಿವಕುಮಾರ್‌ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಬಿ.ವಿ. ಆಚಾರ್ಯ, ಸಿಬಿಐ ಕ್ರಮವನ್ನು ಬಲವಾಗಿ ಆಕ್ಷೇಪಿಸಿದರು. ಅರ್ಜಿದಾರರ ವಿರುದ್ಧ 2020ರ ಅಕ್ಟೋಬರ್‌ 3ರಂದು ಭ್ರಷ್ಟಾಚಾರ ತಡೆ ಕಾಯ್ದೆ-1988ರ ಕಲಂ 12 (2), 13 (1) (ಇ) ಅಡಿಯಲ್ಲಿ ದಾಖಲಿಸಿರುವ ಎಫ್ಐಆರ್‌ ಕಾನೂನುಬಾಹಿರ ಎಂದರು.

ಅರ್ಜಿದಾರರು ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದವರಾಗಿದ್ದು, 1989ರಿಂದ ವಿಧಾನಸಭೆ ಸದಸ್ಯನಾಗಿ ಒಟ್ಟು ಏಳು ಬಾರಿ ಆಯ್ಕೆಯಾಗುವ ಮೂಲಕ ಜನಪ್ರಿಯ ಸಾರ್ವಜನಿಕ ಸೇವಕ ಎನಿಸಿದ್ದಾರೆ. ಈ ಪ್ರಕರಣದಲ್ಲಿ ಅವರ ವಿರುದ್ಧ ದಾಖಲಿಸಿರುವ ಎಫ್ಐಆರ್‌ನಲ್ಲಿ ಕುಟುಂಬದ ಸದಸ್ಯರ ಹೆಸರನ್ನೂ ಸೇರ್ಪಡೆ ಮಾಡಿರುವುದು ತಪ್ಪು ಎಂದರು.

ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣಗಳಲ್ಲಿ ಅನುಸರಿಸಬೇಕಾದ ನಿಯಮಗಳು ಮತ್ತು ಎಫ್ಐಆರ್‌ ದಾಖಲಿಸುವ ಮುನ್ನ ಭ್ರಷ್ಟಾಚಾರ ತಡೆ ಕಾಯ್ದೆಯ ಕಲಂ17 ಎ ಅನುಸಾರ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಪರಿಶೀಲನಾ ಅವಧಿಯಲ್ಲಿನ ಅರ್ಜಿದಾರರ ಆದಾಯ, ಆಸ್ತಿ ಮತ್ತು ವೆಚ್ಚದ ಹೇಳಿಕೆಯ ವಿವರಗಳೇ ಇಲ್ಲ. ಪ್ರಾಥಮಿಕ ತನಿಖೆಯ ಅಂಶಗಳೇನು ಎಂಬುದನ್ನೂ ಎಫ್ಐಆರ್‌ನಲ್ಲಿ ಎಲ್ಲೂ ವಿವರಿಸಿಲ್ಲ. ಸಿಬಿಐ ತನ್ನದೇ ತನಿಖಾ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ವಿವರಿಸಿದರು.

Advertisement

ಭ್ರಷ್ಟಾಚಾರ ನಿಗ್ರಹ ತಡೆ ಕಾಯ್ದೆ ಅನುಸಾರ ಸಾರ್ವಜನಿಕ ಸೇವಕರ ವಿರುದ್ಧ ಮಾತ್ರವೇ ತನಿಖೆ ನಡೆಸಬೇಕಿತ್ತು. ಆದರೆ, ಸಿಬಿಐ ಅರ್ಜಿದಾರರ ಕುಟುಂಬದ ಸದಸ್ಯರ ವಿರುದ್ಧವೂ ಪ್ರಕರಣ ದಾಖಲಿಸಿರುವುದು ಕಾನೂನಿಗೆ ವಿರುದ್ಧವಾಗಿದೆ. ಆದ್ದರಿಂದ, ಈ ಪ್ರಕರಣ ರದ್ದುಗೊಳಿಸಬೇಕು ಎಂದು ಕೋರಿದರು.

2013ರ ಏಪ್ರಿಲ್‌ 1ರಿಂದ 2018ರ ಏಪ್ರಿಲ್‌ 30ರವರೆಗಿನ ಪರಿಶೀಲನಾ ಅವಧಿಗೂ ಮುನ್ನ ಡಿ.ಕೆ.ಶಿವಕುಮಾರ್‌ ಅವರ ಸ್ಥಿರ ಮತ್ತು ಚರಾಸ್ತಿಯ ಒಟ್ಟು ಮೊತ್ತ 33,92,62,793 ಇತ್ತು. ಪರಿಶೀಲನಾ ಅವಧಿಯಲ್ಲಿ ಈ ಮೊತ್ತ 128,60,81,700ಕ್ಕೆ ಏರಿಕೆ ಆಗಿದೆ ಎಂಬುದು ಸಿಬಿಐ ಆರೋಪ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next