ಮುದ್ದೇಬಿಹಾಳ: ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿಯ ಸ್ಥಿತಿ ಗಂಭೀರಗೊಂಡು ಹಲವರಿಗೆ ಗಾಯಗಳಾದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕೃಷ್ಣಾ ನದಿ ತೀರದ ಘಾಳಪೂಜಿ ಗ್ರಾಮವೊಂದರಲ್ಲಿ ನಡೆದಿದೆ.
ಪರಿಶಿಷ್ಟ ಜಾತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೊಠಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6ನೇ ತರಗತಿಯ ಓರ್ವ ವಿದ್ಯಾರ್ಥಿಗೆ ಕೈಕಾಲು ಸುಟ್ಟು ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ವಿಜಯಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೋರ್ವ ವಿದ್ಯಾರ್ಥಿಗೆ ಮೂಗು, ಕೆನ್ನೆ, ಕಿವಿಗೆ ಝಳ ತಾಕಿದ್ದು, ಪ್ರಾಥಮಿಕ ಚಿಕಿತ್ಸೆಯಿಂದ ಚೇತರಿಸಿಕೊಂಡಿದ್ದಾನೆ.
ಘಟನೆ ನಡೆದ ಕೊಠಡಿಯಲ್ಲಿ 16 ವಿದ್ಯಾರ್ಥಿಗಳು ರಾತ್ರಿ ಮಲಗಿದ್ದಾಗ ಏಕಾಏಕಿ ಬೆಂಕಿ ವ್ಯಾಪಿಸಿ ಈ ಅವಘಡ ಸಂಭವಿಸಿದೆ. ವಾರ್ಡನ್ ಮತ್ತು 10 ನೇ ತರಗತಿ ವಿದ್ಯಾರ್ಥಿಗಳು ಧಾವಿಸಿ ಬೆಂಕಿ ನಂದಿಸಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
ಶಾಲೆಗೆ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ ಲಮಾಣಿ ಭೇಟಿ ನೀಡಿ ಘಟನೆ ಕುರಿತು ಮಾಹಿತಿ ಸಂಗ್ರಹಿಸಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗೆ ವರದಿ ಸಲ್ಲಿಸಿದ್ದಾರೆ.
ಶಾಲೆ ಉದ್ಘಾಟನೆಗೊಂಡ ಆರು ತಿಂಗಳಲ್ಲಿಯೇ ಇದು ಎರಡನೇ ಘಟನೆ ಎನ್ನಲಾಗಿದೆ. ಅಗ್ನಿ ಅವಘಡ ಸಂಭವಿಸಿದ್ದರೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಿಳಿಸದೆ ಮುಚ್ಚಿ ಹಾಕುವ ಪ್ರಯತ್ನಗಳು ನಡೆದಿದ್ದವು ಎಂದು ಮೂಲಗಳು ತಿಳಿಸಿವೆ.
ಘಟನೆಯ ಮಾಹಿತಿ ಲಭ್ಯವಾದರೂ ವಸತಿ ಶಾಲೆ ನಮ್ಮ ಇಲಾಖೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಥಳೀಯ ಬಿಇಓ ಬಿ.ಎಸ್.ಸಾವಳಗಿ ಶಾಲೆಗೆ ಭೇಟಿ ನೀಡದೆ ನಿರ್ಲಕ್ಷ್ಯ ತೋರಿರುವುದು ಆಕ್ರೋಶಕ್ಕೆ ಕಾರಣವಾಗಿದೆ.