ಬೆಂಗಳೂರು: ಪೊಲೀಸ್ ಸಿಬ್ಬಂದಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಗೂ ಒದಗಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ ನೀಡಿದ್ದಾರೆ.
ಬನ್ನೇರುಘಟ್ಟ ರಸ್ತೆಯ ಆರ್.ಎ.ಮುಂಡ್ಕೂರ್ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಕಾಡೆಮಿಯ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಂತ್ರಜ್ಞ ಹಾಗೂ ಅಗ್ನಿಶಾಮಕ ಚಾಲಕರ ಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಕೃತಿ ವಿಕೋಪ ಮತ್ತು ಮಾನವ ವಿಕೋಪ ಸಂಭವಿಸಿದಾಗ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿಯ ಪಾತ್ರ ಮಹತ್ವದ್ದಾಗಿರುತ್ತದೆ. ಈ ಸಂದರ್ಭದಲ್ಲಿ ಹೆಚ್ಚಿನ ಪ್ರಾಣ ಹಾಗೂ ಆಸ್ತಿ ಹಾನಿ ಆಗದಂತೆ ತಡೆಗಟ್ಟುವುದು ಸಿಬ್ಬಂದಿಯ ಜವಾಬ್ದಾರಿಯಾಗಿದೆ. ಅದಕ್ಕಾಗಿ ಅವರು ತಮ್ಮ ಪ್ರಾಣವನ್ನೂ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಹೀಗಾಗಿ ಪೊಲೀಸರಿಗೆ ನೀಡುವ ಸೌಲಭ್ಯಗಳಂತೆ ಅಗ್ನಿಶಾಮಕದಳ ಸಿಬ್ಬಂದಿಗೆ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದರು.
ರಾಜ್ಯದ ಎಲ್ಲಾ ಜಿಲ್ಲೆ, ತಾಲೂಕು ಹಾಗೂ ಕೆಲವು ಹೋಬಳಿಗಳಲ್ಲೂ ತುರ್ತುಸೇವೆ ಮತ್ತು ಅಗ್ನಿಶಾಮಕ ಘಟಕವನ್ನು ವ್ಯವಸ್ಥಿತವಾಗಿ ಆರಂಭಿಸುವುದರಲ್ಲಿ ದೇಶದಲ್ಲೇ ಕರ್ನಾಟಕ ಮೊದಲ ರಾಜ್ಯ ಎಂದು ಹೆಗ್ಗಳಿಕೆ ಹೊಂದಿದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಪ್ರವಾಹ ಉಂಟಾದಾಗ ಈ ಇಲಾಖೆಯ ಸಿಬ್ಬಂದಿ ವೈಜ್ಞಾನಿಕವಾಗಿ ನಿಯಂತ್ರಣ ಮಾಡಿದ್ದರಿಂದ ಹೆಚ್ಚಿನ ಅನಾಹುತ ಆಗುವುದು ತಪ್ಪಿತು ಎಂದು ಸ್ಮರಿಸಿದರು.
ಸಮಾರಂಭದಲ್ಲಿ ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಪಿ ಎಂ.ಎನ್. ರೆಡ್ಡಿ, ಐಜಿಪಿ ಸುರೇಶ್ ಇನ್ನಿತರರಿದ್ದರು.