Advertisement

ಮತದಾರರ ಪಟ್ಟಿ ಲೋಪ ಸರಿಪಡಿಸಿ

09:27 PM Nov 16, 2019 | Lakshmi GovindaRaju |

ಚಿಕ್ಕಬಳ್ಳಾಪುರ: ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಯಬೇಕೆಂದರೆ ಮತದಾರರ ಪಟ್ಟಿಯಲ್ಲಿನ ಲೋಪದೋಷಗಳು ಸರಿಪಡಿಸಬೇಕು. ಬಾಕಿ ಇರುವ ಪರಿಷ್ಕರಣೆಯನ್ನು ತ್ವರಿತವಾಗಿ ಪರಿಷ್ಕರಿಸಿ ಕಾಲಮಿತಿಯೊಳಗೆ ಕರಡು ಪಟ್ಟಿ ಪ್ರಕಟಿಸುವಂತೆ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಕೆ.ಜಿ.ಜಗದೀಶ್‌ ಜಿಲ್ಲಾಡಳಿತಕ್ಕೆ ಸೂಚಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ಶನಿವಾರ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಜಿಲ್ಲೆಯಲ್ಲಿ ಕೈಗೊಂಡ ಕ್ರಮಗಳ ಕುರಿತು ಆಯೋಜಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಾರ್ವಜನಿಕರಲ್ಲಿ ಅರಿವು ಮೂಡಿಸಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2020 ಹಾಗೂ ಮತದಾರರ ಪರಿಶೀಲನೆ ಕಾರ್ಯಕ್ರಮದ ಬಗ್ಗೆ ಸಾರ್ವಜನಿಕರಿಗೆ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲು ಜಿಲ್ಲಾಡಳಿತ ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಈ ನಿಟ್ಟಿನಲ್ಲಿ ಬೂತ್‌ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‌ಗಳು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು.

ಈಗಾಗಲೇ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮವು ಜಿಲ್ಲೆಯ 6 ತಾಲೂಕುಗಳಲ್ಲಿ ಯಶಸ್ವಿಯಾಗಿ ನಡೆದಿದ್ದು, ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಈ ಬಗ್ಗೆ ಅರಿವು ಮೂಡಿಸಿ ಮತದಾರರನ್ನು ಪರಿಷ್ಕರಣೆ ಗೊಳಪಡಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಮತದಾನವು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಮತದಾರರ ಪಟ್ಟಿಯ ಸರಿ-ತಪ್ಪುಗಳನ್ನು ಕಡ್ಡಾಯವಾಗಿ ತಿದ್ದುಪಡಿ ಮಾಡಬೇಕು ಎಂದರು.

ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟವರನ್ನು ನೂತನವಾಗಿ ಸೇರ್ಪಡೆ ಮಾಡುವುದು, ಮರಣ ಹೊಂದಿದವರನ್ನು ಪಟ್ಟಿಯಿಂದ ತೆಗೆಯುವುದು, ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಭಾವಚಿತ್ರ, ವಯಸ್ಸು ಮತ್ತಿತರ ಹಲವಾರು ತಪ್ಪುಗಳನ್ನು ತಿದ್ದುಪಡಿ ಮಾಡಿ ಶೇ.100 ರಷ್ಟು ಮತದಾರರ ವಿವರಗಳನ್ನು ಸರಿಪಡಿಸುವುದಕ್ಕೆ ಸಾಮಾನ್ಯ ಸೇವಾ ಕೇಂದ್ರ, ಅಟಲ್‌ಜೀ ಜನಸ್ನೇಹಿ ಕೇಂದ್ರ, ಮತದಾರರ ನೋಂದಣಿ ಕಚೇರಿ, ಗ್ರಾಪಂಗಳಲ್ಲಿನ ಬಾಪೂಜಿ ಸೇವಾ ಕೇಂದ್ರದಲ್ಲಿ ಸಲ್ಲಿಸಿ ಪರಿಶೀಲನೆ ನಡೆಸುವುದಕ್ಕೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

Advertisement

ಮಾಹಿತಿ ದಾಖಲಿಸಿ ಪರಿಶೀಲಿಸಬಹುದು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ 1950 ಸಹಾಯವಾಣಿ ಕೇಂದ್ರದಲ್ಲಿ ಮತದಾರರ ಪಟ್ಟಿಯಲ್ಲಿರುವ ತಮ್ಮ ವಿವರಗಳ ಸೇರ್ಪಡೆ, ತಿದ್ದುಪಡಿ ಮಾಡಿಸಲು ಅವಕಾಶ‌ ಕಲ್ಪಿಸಲಾಗುತ್ತಿದೆ. ನಾಗರಿಕರು ತಮ್ಮ ಕುಟುಂಬಕ್ಕೆ ಸಂಬಂಧಪಟ್ಟ ಮಾಹಿತಿಯನ್ನು ಮತದಾರರ ಸಹಾಯವಾಣಿ ಮೊಬೈಲ್‌ ಆ್ಯಪ್‌, ವೆಬ್‌ಸೈಟ್‌ ಮೂಲಕ ಮಾಹಿತಿ ದಾಖಲಿಸಿ ಪರಿಶೀಲಿಸಬಹುದು ಎಂದರು.

ಸಭೆಯಲ್ಲಿ ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್‌, ಅಪರ ಜಿಲ್ಲಾಧಿಕಾರಿ ಆರತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು, ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರು, ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

ಜಾಗೃತಿ ವಿಶೇಷ ಒತ್ತು – ಜಿಲ್ಲಾಧಿಕಾರಿ: ಜಿಲ್ಲಾಧಿಕಾರಿ ಆರ್‌.ಲತಾ ಮಾತನಾಡಿ, ಜಿಲ್ಲಾದ್ಯಂತ ಸೆ.1 ರಿಂದ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮಕ್ಕೆ ಜಿಲ್ಲಾದ್ಯಂತ ಚಾಲನೆ ನೀಡಿ ಹಂತ ಹಂತವಾಗಿ ನಡೆಸಲಾಗುತ್ತದೆ. ಈ ಕಾರ್ಯಕ್ರಮವನ್ನು ಜಿಲ್ಲೆ, ಬೂತ್‌ ಮಟ್ಟದ ಅಧಿಕಾರಿಗಳು ಹಾಗೂ ಏಜೆಂಟ್‌ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಪಟ್ಟಿ ಪರಿಷ್ಕರಣೆ ನಡೆಸಿದ್ದಾರೆ.

ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಸಮಾರೋಪಾದಿಯಲ್ಲಿ ಸಾಗಿದ್ದು ಉತ್ತಮ ಪ್ರಗತಿ ಸಾಧಿಸಲಾಗಿದೆ. ಜಿಲ್ಲಾ ಸ್ವೀಪ್‌ ಸಮಿತಿ ಹಾಗೂ ಮತದಾರರ ಸಾಕ್ಷರತಾ ಸಂಘವು ಪ್ರಬಂಧ, ರಸಪ್ರಶ್ನೆ, ರಂಗೋಲಿ ಸ್ಪರ್ಧೆ, ಸೈಕಲ್‌, ಬೈಕ್‌ ರ್ಯಾಲಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಲಾಗಿದೆ ಎಂದು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next